ಹುಬ್ಬಳ್ಳಿ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿರುವ ನಡುವೆ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಮೂರು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.
ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಮಿ ರಮೇಶ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂರು ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.
ಉದ್ಯಮಿ ರಮೇಶ ಅವರು ಹಣದ ಮೂಲದ ಬಗ್ಗೆ ಯಾವುದೇ ದಾಖಲೆ ನೀಡಿಲ್ಲ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಶಾಸಕ ಮಾಡಾಳ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ ನಿವಾಸಗಳಲ್ಲಿ 8 ಕೋಟಿ ರೂ. ಹೆಚ್ಚು ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.