ಬೆಂಗಳೂರು : ಪಿಎಫ್ಐ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿ ಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಕಿಡಿಕಾರಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತದ ವಿರುದ್ಧ ಯಾರೇ ಧ್ವನಿಯೆತ್ತಿದರೂ ಸಹ ಅವರ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸಿ ಅವರನ್ನು ಬಂಧಿಸಲಾಗುತ್ತಿದೆ. ವಾಕ್ ಸ್ವಾತಂತ್ರ್ಯ ಇಲ್ಲವಾಗಿದೆ, ಪ್ರತಿಭಟನೆ ನಡೆಸುವ ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ಮತ್ತು ಪ್ರತಿರೋಧದ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.