ಬೆಂಗಳೂರು: ಫೆ 16- ಬಿಪಿಎಲ್ ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಹಳೆಯ ಮಾನದಂಡಗಳೇ ಮುಂದುವರಿಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಉಳ್ಳವರು ಬಿಪಿಎಲ್ ಪಡಿತರ ಚೀಟಿ ಪಡೆದುಕೊಳ್ಳುವುದನ್ನು ತಡೆಯಬೇಕು. ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ಕೂಡಲೇ ಅದನ್ನು ಹಿಂದಿರುಗಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.
ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದವರಿಂದ ಹಣ ವಸೂಲಿ ಮಾಡಬೇಕು. ಅನರ್ಹರು ಕೂಡಲೇ ಸ್ವಯಂ ಪ್ರೇರಣೆಯಿಂದ ಪಡಿತರ ಚೀಟಿಗಳನ್ನು ವಾಪಸ್ಸು ನೀಡಬೇಕು. ಸರ್ಕಾರ ಕಾನೂನು ಕ್ರಮ ಜರುಗಿಸುವ ಮುನ್ನ ಹಿಂದಿರುಗಿಸಿದರೆ ಒಳಿತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸೇರಿದಂತೆ ಹಲವು ಸಮುದಾಯಗಳು ನಡೆಸುತ್ತಿರುವ ಹೋರಾಟ ಕುರಿತು ಪ್ರಸ್ತಾಪಿಸಿ, ಕಾನೂನು, ಸಂವಿಧಾನ ಚೌಕಟ್ಟಿನೊಳಗೆ ಪರಿಹಾರ ರೂಪಿಸಲು ಪ್ರಯತ್ನ ನಡೆಸಲಾಗುವುದು. ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೂರು ವಿಧಾನ ಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿಯೇ ಬಿಜೆಪಿ ಚುನಾವಣಾ ಕೇಂದ್ರ ಸಮಿತಿ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.