ಬೆಂಗಳೂರು, ಜ 11 – ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಏಳು ಮಂದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಅನುಮತಿ ನೀಡಿದ್ದು, ಬಿಜೆಪಿ ಪಕ್ಷಕ್ಕಾಗಿ ದುಡಿದವರನ್ನು ಎಂದೂ ಕಡೆಗಣಿಸುವುದಿಲ್ಲ. ಪಕ್ಷಕ್ಕಾಗಿ ದುಡಿದವರಿಗೆ ಬರುವ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠ್ಟರು, ಸಮಗ್ರವಾಗಿ ವಿಶ್ಲೇಷಿಸಿ ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೂಲ ಬಿಜೆಪಿಯವರನ್ನು ಕಡೆಗಣಿಸುವ ಪ್ರಶ್ನೆ ಬರುವುದಿಲ್ಲ ಎಂದರು.
ಪಕ್ಷದ ವರಿಷ್ಠರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ಕಾರಣವಾದವರು, ಮೂಲ ಬಿಜೆಪಿಯವರಿಗೆ ಅನ್ಯಾಯವಾಗುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಸದ್ಯಕ್ಕೆ ನ್ಯಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಬವಿಸುವುದಿಲ್ಲ. ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಸದಾನಂದಗೌಡ ಸ್ಪಷ್ಟನೆ ನೀಡಿದರು.