ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್, ಸುಪರ್ ಸ್ಪೆಷಾಲಿಟಿ ಆಸ್ಪತ್ರೆ

A B Dharwadkar
ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್, ಸುಪರ್ ಸ್ಪೆಷಾಲಿಟಿ ಆಸ್ಪತ್ರೆ

ಹಾವೇರಿ, 7: ಹಾವೇರಿ ಜಿಲ್ಲೆ ಸರ್ವಜ್ಞ, ಕನಕದಾಸರು ಹಾಗೂ ಶಿಶುನಾಳ ಶರೀಫರ ನಾಡು. ಇವರೆಲ್ಲರೂ ಸಮಾಜದಲ್ಲಿ ಸುಧಾರಣೆಯಾಗಿ ಮನುಷ್ಯ ಸಮಾಜ ನಿರ್ಮಾಣವಾಗಬೇಕೆಂದು ಸಾರಿದವರು. ಮನುಷ್ಯರು ಪರಸ್ಪರ ಪ್ರೀತಿಸಬೇಕೆಂದು ಹೇಳುತ್ತದೆಯೇ ಹೊರತು ದ್ವೇಷಿಸಲು ಯಾವ ಧರ್ಮಗಳು ಹೇಳುವುದಿಲ್ಲ. ಇದರಲ್ಲಿ ನಂಬಿಕೆಯನ್ನು ಇಟ್ಟು ಹಾವೇರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ನಮ್ಮ ಸರ್ಕಾರ ಎಲ್ಲಾ ಪ್ರಯತ್ನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ನಗರದ ಹೊರವಲಯದಲ್ಲಿ ನಿರ್ಮಾಣ ಗೊಂಡಿರುವ ಸರಕಾರಿ ಮೆಡಿಕಲ ಕಾಲೇಜಿನ ಉದ್ಗಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಿಸಿದ್ದೆ. ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು.
ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಾಗಿದ್ದು, ಬಡವರೆಲ್ಲರೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಹಳ ದುಬಾರಿ. ದುಬಾರಿ ಚಿಕಿತ್ಸೆಯನ್ನು ಸಾಮಾನ್ಯ ಜನರು ಭರಿಸುವುದು ಕಷ್ಟ. ಸ್ಥಳೀಯವಾಗಿ ಆರೋಗ್ಯ ಸೇವೆ ನೀಡಬೇಕಾದರೆ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಇರಲೇಬೇಕು.
ನಮ್ಮದು ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಯಾವುದೇ ಧರ್ಮ, ಜಾತಿ, ಪಕ್ಷಕ್ಕೆ ಸೇರಿದವರಾಗಿದ್ದರು ಅವರನ್ನು ಭೇದ ಭಾವವಿಲ್ಲದೆ, ಸೀಮಾತೀತವಾಗಿ ಕಾಣುತ್ತೇವೆ. ಎಲ್ಲ ಜಾತಿ, ಧರ್ಮ, ಪಕ್ಷಗಳಿಗೆ ಸೇರಿದ ಬಡವರಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆಯನ್ನು ನಿಲ್ಲಿಸಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿದೆ, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮೊದಲನೇ ವರ್ಷದಲ್ಲಿಯೇ ಜಾರಿ ಮಾಡಲಾಗಿದೆ. ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿಗಳನ್ನು ಎರಡೂವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದ್ದರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಪ್ರತಿ ವರ್ಷ ₹52,000 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ.
ಹಾವೇರಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ, ಪ್ರವಾಸಿ ಮಂದಿರ, ವಾಲ್ಮೀಕಿ ಭವನ, ನೂತನ ಗ್ರಂಥಾಲಯ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯನ್ನು 250 ರಿಂದ 500 ಹಾಸಿಗೆಗಳ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ. ಹಾವೇರಿ ವೈದ್ಯಕೀಯ ಕಾಲೇಜಿಗೆ ಸುಮಾರು ₹500 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ ₹194 ಕೋಟಿ ನೀಡಿದ್ದು, 300ಕ್ಕೂ ಹೆಚ್ಚು ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಭರಿಸಿದೆ.
ನೀರಾವರಿ ಯೋಜನೆಗಳಿಗೆ ವೇಗ ನೀಡಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಯೇ ಸಮಿತಿ ರಚಿಸೋಣ. ಮಹದಾಯಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಜಾರಿಯಾಗಲೇಬೇಕು. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದರೂ ಅಫಿಡವಿಟ್ ಸಲ್ಲಿಸಿ ವಾಪಸ್ಸು ತೆಗೆದುಕೊಳ್ಳಬೇಕು. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯೋಣ. ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲೇಬೇಕು ಇಲ್ಲದಿದ್ದರೆ ರಾಜ್ಯಕ್ಕೆ ಹಂಚಿಕೆಯಾಗಿರುವ 173 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಸಕ್ತಿ ವಹಿಸಿ ಪರಿಸರ ತೀರುವಳಿ ದೊರಕಿಸಲು ಪ್ರಯತ್ನಿಸಬೇಕೆಂದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.