ಬೆಂಗಳೂರು: ಗ್ರಾಮ ಲೆಕ್ಕಿಗರ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು.
ಆದರೇ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ತಡೆ ನೀಡಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಸ್ತುತ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕೆಇಎ ಮೂಲಕ ಗ್ರಾಮ ಲೆಕ್ಕಿಗರ ನೇಮಕ ಮಾಡುವ ಸಂಬಂಧ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅಧ್ಯಕ್ಷರನ್ನಾಗಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಭೂ ದಾಖಲೆಗಳ ಇಲಾಖೆ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಸಮಿತಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದಲ್ಲಿ ಅದರಿಂದಾಗುವ ಪರಿಣಾಮದ ಸಾಧಕ, ಬಾಧಕಗಳ ಬಗ್ಗೆ ಕೂಲಂಕುಶವಾಗಿ ಚರ್ಚಿಸಿ 15 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.