ಬೆಂಗಳೂರು: ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ವೀರ ಮರಣ ಹೊಂದಿದ ಹುತಾತ್ಮ ಯೋಧರ ಕುಟುಂಬಸ್ಥರಿಗೆ ಹಲವು ಸೌಲಭ್ಯ ನೀಡಲಾಗುತ್ತಿದೆ. ಇದೀಗ ಮುಂದುವರೆದು ಹುತಾತ್ಮ ಯೋಧರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಪೊಲೀಸ್ ಸಹಾಯಕ ಸೇವೆಗಳು, ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ದೇಶದ ಆಂತರಿಕ ಹಾಗೂ ಬಾಹ್ಯ ಸುರಕ್ಷತೆಗಾಗಿ ಹೋರಾಡುವ ಯೋಧರು ತಮ್ಮ ಪ್ರಾಣ ಪಣಕ್ಕಿಟ್ಟು ದೇಶದ ಜನತೆಯ ಭದ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ.
ಕರ್ನಾಟಕದ ಮೂಲ ನಿವಾಸಿಗಳಾದ ಯುದ್ಧ, ಯುದ್ಧದನಂತಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ವೀರ ಮರಣವನ್ನಪ್ಪಿದ ಯೋಧರ ಕುಟುಂಬದ ಸದಸ್ಯರುಗಳಿಗೆ, ಅವಲಂಬಿತರಲ್ಲಿ ಒಬ್ಬರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದಿದ್ದಾರೆ.