ಬೆಳಗಾವಿ, ಡಿ.15:
ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ ನಡೆಸಿ ಅಗತ್ಯ ಸುಧಾರಣೆ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದೆ.
ಬೆಳಗಾವಿ ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ಶಿಕ್ಷಣ ಸಚಿವರಿಗೆ ಕಳುಹಿಸಿದ ಪತ್ರದಲ್ಲಿ, ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳ ತರಗತಿ ಕೊಠಡಿ, ಕಟ್ಟಡಗಳು, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸುರಕ್ಷತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಸ್ಥಿತಿಗತಿ ಪರಿಶೀಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.
ಹಲವಾರು ಶಾಲೆಗಳಲ್ಲಿ ತಕ್ಷಣದ ದುರಸ್ತಿ, ನವೀಕರಣ ಹಾಗೂ ಹೊಸ ಕಟ್ಟಡಗಳ ಅವಶ್ಯಕತೆ ಇದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಅನುಕೂಲಕರ ಕಲಿಕಾ ವಾತಾವರಣ ಒದಗಿಸಲು ಇದು ಅಗತ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, ಅನೇಕ ಶಾಲೆಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಕೊರತೆ ಇದ್ದು, ಇದರಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಪ್ ಗಮನಸೆಳೆದಿದೆ.
ಕರ್ನಾಟಕ ಪಬ್ಲಿಕ್ ಶಾಲೆಗಳ ರಚನೆ ಅಥವಾ ಪುನರ್‌ರಚನೆ ನೆಪದಲ್ಲಿ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ಪಕ್ಷ ಸ್ಪಷ್ಟಪಡಿಸಿದೆ. ಇದರಿಂದ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಲಿದೆ ಎಂದು ಎಚ್ಚರಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಬೆಳಗಾವಿ ಜಿಲ್ಲಾ ಅಧ್ಯಕ್ಷ ವಿಜಯ ಎಲ್ ಪಾಟೀಲ, ನಗರ ಅಧ್ಯಕ್ಷ ರಿಜ್ವಾನ ಮಕಾನದಾರ, ಜಿಲ್ಲಾ ನಾಯಕಿ ಸಂಧ್ಯಾ ಧರ್ಮದಾಸ, ಬೆಳಗಾವಿ ದಕ್ಷಿಣ ಘಟಕದ ಸುಧೀರ ನೇಸರಕರ ಹಾಗೂ ಅಲ್ಪಸಂಖ್ಯಾತ ಘಟಕದ ಅಸ್ಲಮ್ ತಹಸೀಲ್ದಾರ ಸರ್ಕಾರವನ್ನು ಆಗ್ರಹಿಸಿದ್ದಾರೆ.

