ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಇವರುಗಳ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್ ಸಿದ್ಧವಾಗಿದ್ದು, 224 ಕ್ಷೇತ್ರಗಳಲ್ಲೂ ಉಭಯ ನಾಯಕರು ಸಂಚರಿಸಲಿದ್ದಾರೆ.
ಇದರ ಜೊತೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನವೆಂಬರ 5 ರಿಂದ ಈ ಕಾರ್ಯ ಆರಂಭವಾಗಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ 1,100 ಕ್ಕೂ ಹೆಚ್ಚು ಆಕಾಂಕ್ಷಿಗಳು 5,000 ರೂಪಾಯಿ ಶುಲ್ಕ ಪಾವತಿಸಿ ಅರ್ಜಿಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಪೈಕಿ 650ಕ್ಕೂ ಅಧಿಕ ಮಂದಿ ಡಿಡಿ ಸಹಿತ ಅರ್ಜಿ ಸಲ್ಲಿಸಿದ್ದು, ಚಲನಚಿತ್ರ ನಟಿ ಭಾವನಾ ಕೂಡ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಲು ತಮಗೆ ಅವಕಾಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಈಗ ನವೆಂಬರ್ 21ರವರೆಗೆ ವಿಸ್ತರಿಸಲಾಗಿದ್ದು, ಮತ್ತಷ್ಟು ಆಕಾಂಕ್ಷಿಗಳು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.