ಆಳ್ವಾಸ್ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ

A B Dharwadkar
ಆಳ್ವಾಸ್ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ

ಬೆಳಗಾವಿ, ೨೧: ಮೂಡಬಿದರೆಯ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ೧೦ ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಫೋಷಿಸಿದೆ.

ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಮಾರ್ಚ್ ೩೧ ಮತ್ತು ಏಪ್ರಿಲ್ ೧೪ರಂದು ‘ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ’ ನಡೆಯಲಿದ್ದು ೧೦ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಬರೆಯಬಹುದು ಎಂದು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಮತ್ತು ಸಂಸ್ಥೆಯ ವಕ್ತಾರ ಪ್ರಸಾದ ಶೆಟ್ಟಿ ತಿಳಿಸಿದರು.

ಬೆಳಗಾವಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮೂಡಬಿದರೆಯ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪ್ರೋತ್ಸಾಹಿಸುತ್ತ ಬಂದಿದೆ. ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರತಿಭೆ ಆಧರಿಸಿ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರ ನೀಡಲಾಗುತ್ತಿದೆ. ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯುತ್ತಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ. ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು ೧೦೦ ನಿಮಿಷಗಳ ಪರೀಕ್ಷೆಯು ಆಯೋಜಿಸಲಾಗುತ್ತದೆ ಎಂದರು.

ಮಾರ್ಚ್ ೩೧ರಂದು ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಹಾಗೂ ಏಪ್ರಿಲ್
೧೪ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಮೂಡುಬಿದಿರೆ ವಿದ್ಯಾಗಿರಿಯ
ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು,
ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ.
ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸಲು ಮಾರ್ಚ್ ೨೮ ಕೊನೆಯ ದಿನಾಂಕವಾಗಿದ್ದು, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಏಪ್ರಿಲ್ ೧೦ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಈ ವೆಬ್ ಸೈಟ್ https : //scholarship.alvas.org/puc/login.php
ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದರು.

ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಉದ್ಯಮಿ ವಿಠ್ಠಲ ಹೆಗ್ಡೆ ಮತ್ತು ಆಳ್ವಾಸ್ ಅಡ್ಮಿಶನ್ ಅಧಿಕಾರಿ ಪದ್ಮರಾಜ ರೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ:8884477588/ 6366377827/ 6366377823 ಗಳಿಗೆ ಸಂಪರ್ಕಿಸಬಹುದು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.