This is the title of the web page

ಇಂದು ಮಧ್ಯಾಹ್ನ ಆಂಧ್ರ, ಒಡಿಸ್ಸಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಅಸನಿ ಚಂಡಮಾರುತ

ಹೊಸದಿಲ್ಲಿ, ೧೧-: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಅಸನಿ ಚಂಡಮಾರುತವು ಇಂದು ಬುಧವಾರ ಮಧ್ಯಾಹ್ನದ ವೇಳೆಗೆ ಕಾಕಿನಾಡ ಮತ್ತು ವಿಶಾಖಪಟ್ಟಣಮ್ ಅಪ್ಪಳಿಸುವ ಸಾಧ್ಯತೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳಗಳ ಕರಾವಳಿ ತೀರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಭಲ್ಲಾ ಅವರು ಆಂಧ್ರಪ್ರದೇಶ ಮತ್ತು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದ್ದು ಜನರ ಸಹಾಯಕ್ಕಾಗಿ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಯ ಒಂಭತ್ತು ತಂಡಗಳನ್ನು ಒಡಿಶಾ ಕರಾವಳಿ ತೀರದಲ್ಲಿ ನಿಯೋಜಿಸಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಏಳು ತಂಡಗಳನ್ನು ಸನ್ನದ್ಧತೆಯಲ್ಲಿ ಇಡಲಾಗಿದೆ. ಒಡಿಶಾದಲ್ಲಿ ಒಂದು ತಂಡ ಬೀಡು ಬಿಟ್ಟಿದ್ದು ಎನ್​ಡಿಎಫ್​ಆರ್​ನ 17 ಘಟಕಗಳು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 12 ತಂಡಗಳನ್ನು ನಿಯೋಜಿಸಲಾಗಿದ್ದು, ಐದು ತಂಡಗಳನ್ನು ಯಾವುದೇ ಸಮಯದಲ್ಲಿ ಬಳಸಿಕೊಳ್ಳಲು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ.

ಚಂಡಮಾರುತವು ಆಂಧ್ರಪ್ರದೇಶ ಕರಾವಳಿಯಲ್ಲಿ ಗಂಟೆಗೆ 75-85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಚಂಡಮಾರುತದಿಂದಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಸೋಮವಾರದಿಂದ ಅಲ್ಲಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಕೋಲ್ಕತ್ತಾ, ಹೌರಾ, ಮೇದಿನಿಪುರ, ಉತ್ತರ ಮತ್ತು ದಕ್ಷಿಣ 24 ಪರಗಣಗಳು ಮತ್ತು ನಾಡಿಯಾ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಗುರುವಾರದ ನಡುವೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You might also like
Leave a comment