ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಭಂದಕ ವಿಧೇಯಕ-೨೦೨೫ ಕಾಯ್ದೆ ವಿರೋಧಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

A B Dharwadkar
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಭಂದಕ ವಿಧೇಯಕ-೨೦೨೫ ಕಾಯ್ದೆ ವಿರೋಧಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

ಹಾವೇರಿ : ರಾಜ್ಯ ಕಾಂಗ್ರೇಸ್ ಸರ್ಕಾರವು ಅನುಷ್ಠಾನಕ್ಕೆ ತರಲು ಹೊರಟಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಭಂದಕ ವಿಧೇಯಕ-೨೦೨೫ ಕಾಯ್ದೆ ವಿರೋಧಿಸಿ ಬಿಜೆಪಿಯ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ಜಾರಿಗೊಳಿಸದಂತೆ ಮನವಿ ಮಾಡುತ್ತಿದ್ದೇವೆ. ಇದು ನಾಗರೀಕರ ಮೂಲ ಹಕ್ಕುಗಳನ್ನು ಕಸಿದು ಕೊಳ್ಳುತ್ತದೆ. ಸಂವಿಧಾನದ ೧೯ (೧) ಪರಿಚ್ಛೇದ, (೨) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರö್ಯದ ಉಲ್ಲಂಘನೆ ಆಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರö್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ ಎಂದು ಗಮನ ಸೆಳೆಯುತ್ತಿದ್ದೇವೆ. ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದಂತೆ ಇರಿಸುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ, ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳುಮಟ್ಟದ ಕಾಯ್ದೆ ನಮಗೆ ಬೇಕೇ? ಎಂಬ ಪ್ರಶ್ನೆ ಮೂಡಿದೆ ಎಂದರು.

ಮುಖ೦ಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಈ ಕಾಯ್ದೆಯ ಜಾರಿಯಿಂದ ಯಾವುದೇ ವ್ಯಕ್ತಿಯನ್ನು ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನ ತೂಗುಗತ್ತಿ ಎದುರಿಸ ಬೇಕಾಗುತ್ತದೆ. ಇದನ್ನು ಜಾರಿಯಾಗಲು ಅವಕಾಶ ನೀಡಕೂಡದು ಎಂದು ಮನವಿ ಮಾಡಿದರು.

ಮಾಜಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರ ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಮಾಡುತ್ತಿದೆ. ಇದರ ವಿರುದ್ಧ ಜಾಗೃತಿ ಮೂಡಿಸಲು ಈ ಪ್ರತಿಭಟನೆ ನಡೆಸಿದ್ದೇವೆ ಎಂದರು.

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ಜಿಲ್ಲಾ ಒ.ಬಿ.ಸಿ ಮೋರ್ಚಾ ಅಧ್ಯಕ್ಷ ಎನ್.ಪಿ. ಚಾವಡಿ, ಹಾವೇರಿ ನಗರ ಮಂಡಲ ಅಧ್ಯಕ್ಷ ಕಿರಣ ಕೊಳ್ಳಿ ಮಾತನಾಡಿದರು. ಈ ವೇಳೆ ಮಾರುತಿ ಗೊರವರ, ಬಸವರಾಜ ಕೋಳಿವಾಡ, ಗಂಗಾಧರ ಬಾಣದ, ಶಿವಪುತ್ರಪ್ಪ ಕಲಕೋಟಿ, ವಿಶ್ವನಾಥ ಹರವಿ ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.