ಬೆಳಗಾವಿ : ನನ್ನ ಆತ್ಮೀಯ ಸ್ನೇಹಿತ, ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ, ರಾಜ್ಯ ಕಂಡ ಧೀಮಂತ ನಾಯಕ ಉಮೇಶ ಕತ್ತಿ ಅವರ ಅಗಲಿಕೆ ತುಂಬ ನೋವು ತರಿಸಿದೆ. ಹೀಗಾಗಿ ಭಾರವಾದ ಹೃದಯದಿಂದಲೇ ಉಮೇಶ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಷಾದ ವ್ಯಕ್ತಪಡಿಸಿದರು.
ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಶ್ವರಾಜ ಶುಗರ್ಸ್ ಫ್ಯಾಕ್ಟರಿ ಆವರಣದಲ್ಲಿ ಉಮೇಶ ಕತ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅವರ ತೋಟದಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳು ಹಾಗೂ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದರು.
ಕತ್ತಿ ಅವರ ನಿಧನದ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನಗಳ ವರೆಗೆ (ಸೆ.07, ಸೆ.08, ಸೆ.09) ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸುವುದು, ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ಹೊರಡಿಸಲಾಗಿದೆ. ಆದರೆ ತುರ್ತು ಪ್ರವಾಹ ನಿರ್ವಹಣೆ ಕಾರ್ಯ ಚಟುವಟಿಕೆಗಳು ಚಾಲ್ತಿಯಲ್ಲಿರುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಈಗಾಗಲೇ ತೀರ್ಮಾನಿಸಿದಂತೆ ದೊಡ್ಡಬಳ್ಳಾಪುರದಲ್ಲಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಶೋಕಾಚರಣೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ನಾಳೆಯ ಬದಲಾಗಿ ರವಿವಾರ (ಸೆ.11) ಆ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.