This is the title of the web page

ಹಾಲು ಒಕ್ಕೂಟದ ನೇಮಕಾತಿಯಲ್ಲೂ ವ್ಯಾಪಕ ಭ್ರಷ್ಟಾಚಾರ; ಒಂದು ಹುದ್ದೆಗೆ ೨೫ ರಿಂದ ೫೦ ಲಕ್ಷ ರೂ. ಬೇಡಿಕೆ -ಕುಮಾರಸ್ವಾಮಿ

ಬೀದರ, 23- ರಾಜ್ಯದ ಹಾಲು ಒಕ್ಕೂಟಗಳಲ್ಲಿ ಪ್ರತಿಯೊಂದು ಹುದ್ದೆಯ ‌ನೇಮಕಾತಿಯಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಶನಿವಾರ ಬೀದರ ತಾಲ್ಲೂಕಿನ ಕಾಶೆಂಪುರ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆಯ ನೇಮಕ 25ರಿಂದ 50 ಲಕ್ಷ ರೂಪಾಯಿವರೆಗೆ ಲಂಚವನ್ನು ನಿಗದಿ ಮಾಡಲಾಗಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ ಎಂದು ಆರೋಪಿಸಿದರು.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಅರ್ಹ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು ಎಂದೂ ಕುಮಾರಸ್ವಾಮಿ ಒತ್ತಾಯಿಸಿದರು.

ಕೆಪಿಎಸ್‌ಸಿ ಮೂಲಕ ನಡೆಯುವ ಎ.ಸಿ, ಡಿವೈಎಸ್‌ಪಿ ಹುದ್ದೆ ನೇಮಕಾತಿಯಲ್ಲಿ  ಒಂದು ಕೋಟಿ ರೂಪಾಯಿ ಕೇಳಲಾಗುತ್ತಿದೆ. ನನ್ನ ಹತ್ತಿರ ಅನೇಕ ‌ಅಭ್ಯರ್ಥಿಗಳು ಬಂದಿದ್ದರು. ಆದರೆ, ನನ್ನ ಬಳಿ‌ ಇದೆಲ್ಲ ನಡೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿ ಕಳಿಸಿದ್ದೇನೆ’ ಎಂದು ಅವರು ತಿಳಿಸಿದರು.

You might also like
Leave a comment