ಬೆಳಗಾವಿ: ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಸತಿ, ಊಟೋಪಾಹಾರ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಸಮಿತಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಗಣ್ಯರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು. ಕಳೆದ ಬಾರಿಯಂತೆ ಉತ್ತಮ ವ್ಯವಸ್ಥೆ ಮಾಡಿಕೊಳ್ಳಬೇಕು.
ಇನ್ನೂ ಸಾಕಷ್ಟು ಸಮಯ ಇರುವುದರಿಂದ ಊಟ, ವಸತಿ, ಕುಡಿಯುವ ನೀರು, ಸಾರಿಗೆ, ತುರ್ತು ಆರೋಗ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಇದಲ್ಲದೇ ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೂ ಅಡಚಣೆಯಾಗದಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಗಣ್ಯರ ಭದ್ರತೆ, ಸುಗಮ ಸಂಚಾರಕ್ಕೆ ಕ್ರಮ:
ಗಣ್ಯರ ಭದ್ರತೆ, ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದರು.
ನಗರದಲ್ಲಿರುವ ಸರಕಾರಿ ಹಾಗೂ ಖಾಸಗಿ ಸೇರಿದಂತೆ ಎಲ್ಲ ಬಗೆಯ ವಸತಿ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗಿದೆ. ಅಗತ್ಯತೆ ಅಧರಿಸಿ ಅವುಗಳನ್ನು ಬಳಕೆ ಮಾಡಲಾಗುವುದು ಎಂದು ವಸತಿ ಸಮಿತಿಯ ಅಧ್ಯಕ್ಷರೂ ಆಗಿರುವ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಘಾಳಿ ತಿಳಿಸಿದರು.
ಆಹಾರ ಸಮಿತಿಯ ಅಧ್ಯಕ್ಷರಾದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಗೀತಾ ಕೌಲಗಿ, ಸುವರ್ಣ ಸೌಧ ಬ್ಯಾಂಕ್ವೆಟ್ ಹಾಲ್, ನೆಲಮಹಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಊಟೋಪಾಹಾರ ವ್ಯವಸ್ಥೆ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಸುವರ್ಣ ವಿಧಾನಸೌಧ, ಪ್ರವಾಸಿಮಂದಿರ, ವಿಟಿಯು, ವಸತಿಗೃಹಗಳು ಸೇರಿದಂತೆ ಎಲ್ಲೆಡೆ ನುರಿತ ವೈದ್ಯರ ನೇತೃತ್ವದಲ್ಲಿ ತಂಡವನ್ನು ನಿಯೋಜಿಸಲಾಗುವುದು. ಇದಲ್ಲದೇ ಆಂಬ್ಯುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ ವಿವರಿಸಿದರು.
ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರವೀಣ ಬಾಗೇವಾಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಉಪ ಪೊಲೀಸ್ ಆಯುಕ್ತ ರವೀಂದ್ರ ಗಡಾದಿ, ನಂದಗಾವಿ ಮತ್ತಿತರರು ಉಪಸ್ಥಿತರಿದ್ದರು.
ಆಹಾರ, ಸಾರಿಗೆ, ವಸತಿ, ಆರೋಗ್ಯ, ದೂರು ನಿರ್ವಹಣಾ ಸಮಿತಿಯ ಅಧ್ಯಕ್ಷರುಗಳು, ಆರೋಗ್ಯ, ಲೋಕೋಪಯೋಗಿ ಇಲಾಖೆ, ಪೊಲೀಸ್, ಮಹಾನಗರ ಪಾಲಿಕೆ, ಆಹಾರ ಮತ್ತು ನಾಗರಿಕ ಸರಬರಾಜು, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.