ಸಿನಿಮಾ ಟಿಕೆಟಿಗೆ ₹200 ದರ ನಿಗದಿ ; ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

A B Dharwadkar
ಸಿನಿಮಾ ಟಿಕೆಟಿಗೆ ₹200 ದರ ನಿಗದಿ ; ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ತಡೆ ನೀಡಿದೆ.
ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ಇಂದು, ಮಂಗಳವಾರ ಪ್ರಕಟಿಸಿತು. “ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025ಕ್ಕೆ ತಡೆ ಕೋರಿರುವ ಮಧ್ಯಂತರ ಕೋರಿಕೆಯನ್ನು ಪುರಸ್ಕರಿಸಲಾಗಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರಲಿದೆ” ಎಂದು ನ್ಯಾಯಾಲಯ ಆದೇಶಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಚಿತ್ರ ಮಂದಿರಗಳಲ್ಲಿ ಟಿಕೆಟ್‌ ದರ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಶಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್, ವಿ ಕೆ ಫಿಲ್ಮ್ಸ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ.
“ಸಿನಿಮಾ ಹಾಲ್‌ಗಳನ್ನು ರೂಪಿಸಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಇಲ್ಲಿ ಸರ್ಕಾರವು 200 ರೂಪಾಯಿ ಅಥವಾ ಇಂತಿಷ್ಟೇ ದರಕ್ಕೆ ಟಿಕೆಟ್‌ ಮಾರಾಟ ಮಾಡಬೇಕು ಎಂದು ಹೇಳಲಾಗದು. ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ಅಡಿ ದರ ನಿಗದಿಯು ಕಾನೂನುಬಾಹಿರ ಕ್ರಮವಾಗಿದೆ. 2017ರಲ್ಲಿ ರಾಜ್ಯ ಸರ್ಕಾರ ಇಂಥದ್ದೇ ಆದೇಶ ಮಾಡಿತ್ತು. ಈಗ ನಿಯಮಗಳಿಗೆ ತಿದ್ದುಪಡಿ ಮಾಡಿ ಸಿನಿಮಾ ದರ ನಿಗದಿಪಡಿಸಲಾಗಿದೆ” ಎಂದು ಅರ್ಜಿದಾರರು ವಾದಿಸಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.