ಕಬ್ಬು ಬೆಳೆಗಾರರ ಪರವಾಗಿ ಸತತ 7 ಗಂಟೆ ಸಭೆ ನಡೆಸಿ ರೈತರ ಪರ ನಿಂತ ಸರ್ಕಾರ : ಕೇಂದ್ರದಿಂದ ಅನ್ಯಾಯ

A B Dharwadkar
ಕಬ್ಬು ಬೆಳೆಗಾರರ ಪರವಾಗಿ ಸತತ 7 ಗಂಟೆ ಸಭೆ ನಡೆಸಿ ರೈತರ ಪರ ನಿಂತ ಸರ್ಕಾರ : ಕೇಂದ್ರದಿಂದ ಅನ್ಯಾಯ

ಬೆಂಗಳೂರು 7: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ.

ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು.

ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ.
ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ.

ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ.
10.25 ಇಳುವರಿ ಇರುವ ಕಬ್ಬಿಗೆ 3100 ರೂ, 11.25 ಇಳುವರಿ ಕಬ್ಬಿಗೆ 3200 ರೂ ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವ ಹೆಚ್.ಕೆ.ಪಾಟೀಲ್ , ಸಕ್ಕರೆ ಸಚಿವ ಶಿವಾನಂದ ಪಾಟೀಲರು ಮಾತುಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚಿಸಿ, “ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.

ಕ್ಯಾಬಿನೆಟ್ ತೀರ್ಮಾನದಂತೆ ಶುಕ್ರವಾರ ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.

ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100ರೂ ಹೆಚ್ಚಳ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಟಿಯ ಇತರೆ ಮುಖ್ಯ ಅಂಶಗಳು:

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ 10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್‌ಗೆ ರೂ.3550 ನಿಗದಿಪಡಿಸಿದೆ.

ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆ ಅಂದಾಜಿದೆ.

ಶುಕ್ರವಾರದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಮನವಿ ಮಾಡಿದ್ದು, ರೈತರು ಸಹ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮನವಿ ಮಾಡಿದ್ದೇವೆ.

ಕೆಲವು ದಿನಗಳಿಂದ ರೈತರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಫ್ಆರ್ಪಿ ಸರಿಯಿಲ್ಲ, ಇನ್ನೂ ಹೆಚ್ಚು ನೀಡಬೇಕೆಂದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಹಾವೇರಿ ಮತ್ತು ಗುಲ್ಬರ್ಗಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾ ರೈತರ ಮುಖಂಡರೊಂದಿಗೆ ಬೆಳಗಾವಿ ಜಿಲ್ಲಾಧಿಕಾರಿ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಗಳು ವಿಫಲವಾದ ಬಳಿಕ ಸಂಪುಟದ ಸಹದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳು ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಅವರು ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರೊಂದಿಗೆ ಮಾತುಕತೆ ನಡೆಸಿ, 10.5 ರಿಕವರಿ ಇರುವ ಕಬ್ಬಿಗೆ ರೂ. 3100 ಮತ್ತು 11.25 ರಿಕವರಿ ಇರುವ ಕಬ್ಬಿಗೆ ರೂ. 3200 ದರ ನಿಗದಿಪಡಿಸಲು ಸಕ್ಕರೆ ಕಾರ್ಖಾನೆಗಳಿಗೆ ಆಫರ್ ನೀಡಿದ್ದರು. ಇದಕ್ಕೆ ಕಾರ್ಖಾನೆ ಮಾಲಿಕರು ಒಪ್ಪಿಗೆ ನೀಡಿದ್ದರು. ಆದರೆ ಈ ದರಕ್ಕೆ ಪ್ರತಿಭಟನಾ ನಿರತ ರೈತರು ಒಪ್ಪಿಗೆ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ನಿನ್ನೆ ವಿಸ್ತಾರವಾಗಿ ಚರ್ಚೆ ನಡೆಸಿ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಪ್ರಧಾನಮಂತ್ರಿ ಅವರಿಗೆ ಪತ್ರ ಬರೆದಿದ್ದೇವೆ.

ಶುಕ್ರವಾರ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ರೈತರ ಪ್ರತಿನಿಧಿಗಳೊಂದಿಗೆ ಬೆಳಿಗ್ಗೆ 11.30 ರಿಂದ ಸಂಜೆ 6 ಗಂಟೆವರೆಗೆ ಸಮಗ್ರವಾಗಿ ಮಾತುಕತೆ ನಡೆಸಿದ್ದೇವೆ.

ಸಕ್ಕರೆ ಕಾರ್ಖಾನೆ ಮಾಲಿಕರು ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದು, ಇದನ್ನು ಬಗೆಹರಿಸಲು ಚರ್ಚೆ ನಡೆಸುವುದಾಗಿ ತಿಳಿಸಿದ್ದೇವೆ.

ಸಕ್ಕರೆಯ ಎಂಎಸ್ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕೇಂದ್ರಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.