ಬೆಳಗಾವಿ, ಸೆ.25 : ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಅವುಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನೆಹರೂ ನಗರದ ಕೆಪಿಟಿಸಿಎಲ್ ಭವನದಲ್ಲಿ ಜಿಲ್ಲಾ ಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಜನತಾ ದರ್ಶನ ಪೂರ್ವಸಿದ್ಧತೆ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಎಲ್ಲ ಜನಪ್ರತಿಗಳು ಭಾಗವಹಿಸಲಿದ್ದಾರೆ.
ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆ( ಐಪಿಜಿಆರ್ ಎಸ್ ) ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಿದ ಬಳಿಕ ನಿಗದಿತ ಕಾಲಮಿತಿಯಲ್ಲಿ ಅವುಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವಿಲೇವಾರಿ ಮಾಡಬೇಕಾಗುತ್ತದೆ ಆದ್ದರಿಂದ ಪ್ರತಿಯೊಂದು ಅರ್ಜಿ ವಿಲೇವಾರಿಗೆ ತ್ವರಿತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವುಗಳ ವಿಲೇವಾರಿಗೆ ಸಮರ್ಪಕ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಜನತಾದರ್ಶನ ಹಮ್ಮಿಕೊಳ್ಳಲಾಗಿರುತ್ತದೆ. ಆದ್ದರಿಂದ ಪ್ರತಿಯೊಂದು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಜನತಾ ದರ್ಶನದಲ್ಲಿ ಊಟದ ವ್ಯವಸ್ಥೆ:
ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲೆಯ ಸಾರ್ವಜನಿಕರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.
ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ:
“ಜನತಾ ದರ್ಶನ” ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಕೂಡ ಫಲಾನುಭವಿಗಳಿಗೆ ವಿತರಿಸಲಾಗುವುದು.
ಆದ್ದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸೌಲಭ್ಯಗಳನ್ನು ವಿತರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ನಿರ್ದೇಶನ ನೀಡಿದರು.
ಆರೋಗ್ಯ, ಕೃಷಿ, ತೋಟಗಾರಿಕೆ, ಕಾರ್ಮಿಕ, ಸಮಾಜಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳು ಸೌಲಭ್ಯಗಳನ್ನು ವಿತರಿಸಲಿವೆ.
ಸಭೆಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಎಲ್ಲ ಇಲಾಖೆಯ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ನೀಡಲಾಗಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕಾರ್ಯಕ್ರಮ ಯಶಸ್ಚಿಗೊಳಿಸಬೇಕು ಎಂದು ತಿಳಿಸಿದರು.
ಈಗಾಗಲೇ ಕೆಪಿಟಿಸಿಎಲ್ ಭವನದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾರ್ವಜನಿಕರ ಅಹವಾಲುಗಳ ಸ್ವೀಕಾರ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆಗೆ ಆಯಾ ಇಲಾಖೆಯ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಎಂಟು ಕೌಂಟರ್ ಗಳನ್ನು ಸ್ಥಾಪಿಸಲಾಗುವುದು. ಅರ್ಜಿ ಸ್ವೀಕರಿಸಿದ ಕೂಡಲೇ ಅದನ್ನು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಲಾಗುವುದು ಎಂದು ಅಶೋಕ ದುಡಗುಂಟಿ ವಿವರಿಸಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಎಸಿಪಿ ಕಟ್ಟಿಮನಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.