ಬೆಳಗಾವಿ: ಕೊರೋನಾ ಸಂಬಂಧ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ, ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ ಧರಿಸುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ.
ಸೋಮವಾರ ಸುವರ್ಣಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ, ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆಯ ಬಳಿಕ ಸುಧಾಕರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಬಾರ್, ಪಬ್ ಹಾಗೂ ಹೊಟೇಲ್ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಮತ್ತು ಕಡ್ಡಾಯವಾಗಿ ಎಲ್ಲರೂ ಮಾಸ್ಕ ಧರಿಸಬೇಕು ಎಂದು ಅವರು ಹೇಳಿದರು. ಆದರೆ ಮಾಸ್ಕ ಧರಿಸಿದವರಿಗೆ ಯಾವುದೇ ದಂಡ ವಿಧಿಸುವುದಿಲ್ಲ.
ಸಾರ್ವಜನಿಕ ಸ್ಥಳಗಳು, ಶಾಲೆ ಕಾಲೇಜುಗಳು ಹಾಗು ಚಿತ್ರಮಂದಿರಗಳಲ್ಲಿ ಮಾಸ್ಕ ಧರಿಸುವುದು ಕಡ್ಡಾಯ ಮಾಡಲಾಗಿದೆ. ಆದರೆ ರಾಜಕೀಯ ಸಭೆ, ಸಮಾರಂಭಗಳು, ಬಸ್ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಆದರೆ ಮೂರನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಒಳಾಂಗಣ ಪ್ರದೇಶಗಳಲ್ಲಿ ಆಸನಗಳು ಇರುವಷ್ಟು ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಸಹ ಕಡ್ಡಾಯವಾಗಿ ಮಾಸ್ಕ ಧರಿಸಬೇಕು. ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಅವರು ಹೇಳಿದರು.