ಬೆಳಗಾವಿ, 19: ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಧಾರಾಕಾರ ಮಳೆಯನ್ನೂ ಲೆಕ್ಕಿಸದೇ ಹಿಂದೂ ಸಮಾಜದ ಮುಖಂಡರು ನಗರದಲ್ಲಿ ಮಂಗಳವಾರ ತೀವ್ರ ಪ್ರತಿಭಟನೆ ನಡೆಸಿದರು.
ಧರ್ಮವೀರ ಸಂಭಾಜಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕಿರ್ಲೋಸ್ಕರ ರಸ್ತೆ, ಶನಿವಾರ ಖೂಟ, ಕಾಕತಿವೇಸ, ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೌನ ಮೆರವಣಿಗೆ ನಡೆಸಿದರು. ಧರ್ಮಸ್ಥಳಕ್ಕೆ ಕಳಂಕ ತರಲು ಯತ್ನಿಸುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ರಾಜ್ಯದ ವಿವಿಧ ಜಿಲ್ಲೆಗಳಿಂದ ‘ಧರ್ಮಸ್ಥಳ ಚಲೋ’ ಚಳವಳಿ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ಕೊಟ್ಟರು.
ಮಹಿಳೆಯರು, ವೃದ್ಧರು ಸೇರಿದಂತೆ ಎಲ್ಲರೂ ಕೊಡೆಗಳನ್ನು ಹಿಡಿದುಕೊಂಡು ಮತ್ತು ಮಳೆಯ ಉಡುಪು ಧರಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಹೆಜ್ಜೆ ಹಾಕಿದರು. ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಪ್ರಯತ್ನಿಸುವವರ ವಿರುದ್ಧ ಫಲಕಗಳನ್ನು ಪ್ರದರ್ಶಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಜಾತಿ, ಒಂದು ವರ್ಗಕ್ಕೆ, ಒಂದು ಭಾಷೆ, ಒಂದು ಸಮುದಾಯಕ್ಕೆ ಸೇರಿದ ಕ್ಷೇತ್ರವಲ್ಲ . ಈ ಕ್ಷೇತ್ರ ಇಡಿ ಭಾರತ ದೇಶದ ಧಾರ್ಮಿಕ ಕ್ಷೇತ್ರವಾಗಿದ್ದು, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು. ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆ.ಎಲ್.ಇ.ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಈ ಸಂದರ್ಭದಲ್ಲಿ ಮಾತನಾಡಿ ಸರಕಾರವನ್ನು ಆಗ್ರಹಿಸಿದರು.
ಕ್ಷೇತ್ರದ ಬಗ್ಗೆ ಕಳಂಕ ತರುವ ವ್ಯಕ್ತಿಗಳು ನಿರಾಧಾರ ಆರೋಪಗಳನ್ನು ಮಾಡುತ್ತಿದ್ದು, ಅಂತಹ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕೆಂದು ಪ್ರತಿಭಟನೆಯ ಕೊನೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸುವ ಸಂದರ್ಭದಲ್ಲಿ ಡಾ.ಪ್ರಭಾಕರ ಕೋರೆ ಅವರು ನುಡಿದರು.
ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಸರಕಾರ ಸ್ಪಂದಿಸುವ ಮೂಲಕ ತನಿಖೆಗಾಗಿ ಎಸ್.ಐ.ಟಿ. ತಂಡವನ್ನು ರಚಿಸಿತ್ತು. ಆದರೆ ಈ ಎಸ್.ಐ.ಟಿ ತಂಡ ನಡೆಸಿದ ತನಿಖೆಯಲ್ಲಿ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ. ಹೀಗಾಗಿ ಕ್ಷೇತ್ರಕ್ಕೆ ಕಳಂಕ ತರುವ ವ್ಯಕ್ತಿಗಳು ಮಾಡಿರುವ ಆರೋಪಗಳುs ಸುಳ್ಳಾಗಿದ್ದು, ಇದೊಂದು ಹಿಂದೂ ಧಾರ್ಮಿಕ ಕ್ಷೇತ್ರವನ್ನು ಹತ್ತಿಕ್ಕುವ ಕುತಂತ್ರ ನಡೆಯುತ್ತಿದೆ. ಅದಕ್ಕಾಗಿ ಈ ಘಟನೆಯ ಹಿಂದೆ ಯಾರಿದ್ದಾರೋ ಅವರ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ ಮಾತನಾಡಿ, ಬೇರೆ ಧರ್ಮಗಳ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ ಹಾಕುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮ ವಹಿಸುತ್ತದೆ. ಆದರೆ, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಪೋಸ್ಟಗಳನ್ನು ಹಾಕಿದ್ದರೂ ಮೌನವಾಗಿದೆ. ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ನಾವು ‘ಧರ್ಮಸ್ಥಳ ಚಲೋ’ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ. ಆಗ ಪ್ರತಿ ಜಿಲ್ಲೆಯಿಂದ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ, ಕಾನೂನು ಕೈಗೆತ್ತಿಕೊಳ್ಳುತ್ತಾರೆ. ಇದನ್ನು ನಿಯಂತ್ರಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತದೆ’ ಎಂದರು.
ಬೆಳಗಾವಿಯ ರುದ್ರಮಠದ ಹರಿಗುರು ಮಹಾರಾಜರು ಮಾತನಾಡಿ, ‘ಧಾರಾಕಾರ ಮಳೆ ಮಧ್ಯೆಯೂ ಮೌನ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವ ಮೂಲಕ ಹಿಂದೂಗಳೆಲ್ಲ ಒಗ್ಗಟ್ಟಾಗಿದ್ದೇವೆ. ಹಿಂದೂ ಸಂಸ್ಕೃತಿ ಮತ್ತು ಯಾತ್ರಾ ಕೇಂದ್ರಗಳ ಮೇಲಿನ ದಾಳಿಯನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡಿದ್ದೇವೆ’ ಎಂದು ಹೇಳಿದರು.
ಬೈಲಹೊಂಗಲದ ಮೂರುಸಾವಿರಮಠದ ಪ್ರಭುನೀಲಕಂಠ ಸ್ವಾಮೀಜಿ, ‘ಸತ್ಯ ಯಾವುದಕ್ಕೂ ಹೆದರುವುದಿಲ್ಲ. ನಾವೆಲ್ಲರೂ ಸತ್ಯ ಮತ್ತು ಧರ್ಮಸ್ಥಳದ ಪರವಾಗಿ ನಿಲ್ಲುತ್ತೇವೆ’ ಎಂದು ನುಡಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಧರ್ಮಸ್ಥಳ ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ. ಅದರ ವಿರುದ್ಧ ಪಿತೂರಿ ಮಾಡುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಸ್ಥಳ ಕ್ಷೇತ್ರ ಹಿಂದೂ ಸಮಾಜವನ್ನು ಒಗ್ಗುಡಿಸುವ ಕ್ಷೇತ್ರವಾಗಿದೆ. ಈ ಕ್ಷೇತ್ರದಿಂದ ಇಂದು ಅನೇಕ ಸಮಾಜಮುಖಿ ಕಾರ್ಯಗಳು ನಡೆದಿವೆ. ರೈತರಿಗೆ ಅನಕೂಲವಾಗುವಂತಹ ಕಾರ್ಯಕ್ರಮಗಳು ನಡೆಯುತ್ತ ಬಂದಿವೆ. ನಿರಂತರ ಅನ್ನ ದಾಸೋಹದ ಮೂಲಕ ತನ್ನ ಸಾಮಾಜಿಕ ಸೇವೆಯನ್ನು ಮುಂದುವರೆಸಿಕೊಂಡ ಬಂದ ಡಾ. ವಿರೇಂದ್ರ ಹೆಗ್ಗಡೆ ಅವರ ಕುಟುಂಬದವರನ್ನು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ನಾವೆಲ್ಲ ತಡೆಯಬೇಕಾಗಿದೆ. ಸರಕಾರ ಕೂಡಲೆ ಎಚ್ಚತ್ತುಕೊಂಡು ಕ್ಷೇತ್ರದ ವಿರುದ್ದ ಪಿತೂರಿ ನಡೆಸುತ್ತಿರುವ ಬಗ್ಗೆ ತೀವ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ ಅವರು, ಮುಂಬರುವ ದಿನಗಳಲ್ಲಿ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆದರೆ ಸಹಿಸುವುದಿಲ್ಲ ಎಂದು ನುಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ‘800 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿದ ಧರ್ಮಸ್ಥಳವನ್ನು ಗುರಿಯಾಗಿಸಲಾಗಿದೆ. ಈ ಪ್ರಕರಣದಲ್ಲಿ ಎಸ್ಐಟಿಗೆ ಯಾವ ಪುರಾವೆಯೂ ಸಿಕ್ಕಿಲ್ಲ. ಧರ್ಮ ರಕ್ಷಣೆಗಾಗಿ ಈಗ ಎಲ್ಲ ಹಿಂದೂಗಳು ಒಗ್ಗಟ್ಟಾಗಿದ್ದಾರೆ’ ಎಂದರು.
ಮಹಾಂತೇಶ ಕವಟಗಿಮಠ , ಮಾಜಿ ಶಾಸಕ ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಜಗದೀಶ ಹಿರೇಮಣಿ ಅವರುಗಳು, ಅನಾಮಿಕ ಹೆಸರಿನಲ್ಲಿ ಓರ್ವ ವ್ಯಕ್ತಿ ಶ್ರೀ ಕ್ಷೇತ್ರದ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ಖಂಡನೀಯವಾಗಿದೆ. ಆ ವ್ಯಕ್ತಿ ಯಾರು, ಯಾರ ಕುಮ್ಮಕ್ಕಿನಿಂದ ಅವನು ಈ ಕಾರ್ಯಕ್ಕೆ ಕೈ ಹಾಕಿದ್ದಾನೆ. ಎಲ್ಲ ಸತ್ಯಾಂಶ ಹೊರ ಬರಬೇಕಾಗಿದೆ. ಅನಾಮಿಕ ವ್ಯಕ್ತಿಯನ್ನು ಮಂಪರು ಪರೀಕ್ಷೇಗೆ ಒಳಪಡಿಸಿ ಸತ್ಯವನ್ನು ಬಯಲಿಗೆಳೆಯಬೇಕಾಗಿದೆ. ಸರಕಾರ ಈ ಕುರಿತು ಗಂಭೀರವಾಗಿ ಆಲೋಚನೆ ಮಾಡಬೇಕು. ಇಲ್ಲದಿದ್ದಲ್ಲಿ ಹಿಂದೂ ಸಮಾಜದ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾದಿತು ಎಂದು ಎಚ್ಚರಿಕೆ ನೀಡಿದರು..
ನಂತರ ಜಿಲ್ಲಾಧಿಕಾರಿ ಮಹ್ಮದ ರೋಷನ್ ಅವರಿಗೆ ಎಲ್ಲ ಮಠಾಧೀಶರ ಸಮ್ಮುಖದಲ್ಲಿ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಲಾಯಿತು.
ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ವಕ್ಕುಂದ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ, ಮುರುಘೇಂದ್ರಗೌಡ ಪಾಟೀಲ ಇತರರಿದ್ದರು.

