ಬೆಂಗಳೂರು, ಸೆ 12 : (ಸಮದರ್ಶಿ ಸುದ್ದಿ) - ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸಬೇಕೆಂಬ ಬೇಡಿಕೆ ಸರ್ಕಾರದ ಮುಂದಿದ್ದು, ಈ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆನೇಕಲ್ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟವು ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಖಾಸಗಿ ಶಾಲೆಗಳ ವಿವಿಧ ಬೇಡಿಕೆಗಳು ಸರ್ಕಾರದ ಗಮನದಲ್ಲಿವೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳ ಸಮಯ ಬದಲಾಯಿಸುವಂತೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಸಡಿಲಿಸುವ ಕುರಿತು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸಲ್ಲಿಸಿದ್ದು, ಅದರ ಶಿಫಾರಸುಗಳನ್ನು ಪರಿಶೀಲಿಸಲಾಗುತ್ತಿದೆ.
ಬೆಂಗಳೂರು ನಗರದಲ್ಲಿನ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮನೆ ಬಾಡಿಗೆ ಭತ್ಯೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸಬೇಕೆಂಬ ಬೇಡಿಕೆಯೂ ಇದೆ. ಈ ವಿಷಯದಲ್ಲಿಯೂ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಖಾಸಗಿ ಶಾಲೆಗಳು ಹಣ ಪಾವತಿಸಿ ಸರ್ಕಾರಿ ಪಠ್ಯಪುಸ್ತಕಗಳನ್ನು ಪಡೆಯಲು ಸಿದ್ಧವಿರುವುದಾಗಿ ಮನವಿ ಮಾಡಿವೆ. ಈ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಅಧಿಕಾರದಲ್ಲಿದ್ದಾಗ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಹಾಗೂ ಮಕ್ಕಳ ಹಾಜರಾತಿ ಹೆಚ್ಚಿಸಲು ‘ಅಕ್ಷಯ’ ಕಾರ್ಯಕ್ರಮ ಜಾರಿಗೆ ತಂದಿದ್ದರು. ಶಾಲೆಗೆ ಪ್ರತಿನಿತ್ಯ ಹಾಜರಾಗುವ ಪ್ರತಿ ಮಗುವಿಗೂ ಒಂದು ರೂಪಾಯಿ ಪ್ರೋತ್ಸಾಹ ಧನ ನೀಡುವ ಮೂಲಕ ಮಕ್ಕಳನ್ನು ಶಾಲೆಯತ್ತ ಸೆಳೆಯುವ ಪ್ರಯತ್ನ ಮಾಡಲಾಗಿತ್ತು ಎಂದು ಮಧು ಬಂಗಾರಪ್ಪ ಸ್ಮರಿಸಿದರು.
ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಒಂದು ಕೋಟಿಗೂ ಹೆಚ್ಚು ಮಕ್ಕಳಿದ್ದು, ಅವರಿಗಾಗಿ ಕೆಲಸ ಮಾಡುವುದು ದೇವರ ಕೆಲಸ ಮಾಡಿದಂತೆ. ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿಯೂ ಸುಧಾರಣೆ ಕಂಡುಬಂದಿದೆ ಎಂದರು. ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ನಿಯಮಗಳನ್ನು ಸಡಿಲಿಸುವ ಕುರಿತು ವಿಶೇಷ ಸದನ ಸಮಿತಿ ಮಾಡಿರುವ ಶಿಫಾರಸುಗಳನ್ನು ಸರ್ಕಾರದ ಆದೇಶವಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಸಮಿತಿಯ ಶಿಫಾರಸುಗಳನ್ನು ಇಲಾಖೆಗೆ ಕಳುಹಿಸಲಾಗಿದ್ದು, ಪರಿಶೀಲನೆಯ ನಂತರ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.