ಬೆಂಗಳೂರು, ಅ. 5 : (ಸಮದರ್ಶಿ ಸುದ್ದಿ) - ಸುಪ್ರೀಂ ಕೋರ್ಟ ಆದೇಶವನ್ನೇ ನಕಲಿ ಮಾಡಿ, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಉತ್ತರ ವಲಯದ ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
2018ರಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಶಂಕರ್ ಎಂಬಾತ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಈತನ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ ರದ್ದುಪಡಿಸಿದೆ ಎಂಬಂತೆ ನಕಲಿ ಆದೇಶ ಸೃಷ್ಟಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಶ್ರೀಕಾಂತ್ ಎಂಬಾತ ಸುಪ್ರೀಂ ಕೋರ್ಟ ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿಸಿದ್ದ ಎನ್ನಲಾಗಿದೆ. ಅದನ್ನು ನೈಜ ನ್ಯಾಯಾಲಯದ ಆದೇಶವೆಂದು ಬಿಂಬಿಸಿ ಶಂಕರ್‌ನನ್ನು ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು.
ಹಲವು ವರ್ಷಗಳ ಬಳಿಕ ಇತ್ತೀಚೆಗೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ ಆದೇಶ ನಕಲಿ ಎಂಬುದು ಬೆಳಕಿಗೆ ಬಂದಿದೆ. ಬಳಿಕ ಕಾರಾಗೃಹ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಮೊದಲು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ ಅವರನ್ನು ಬಂಧಿಸಿದ್ದರು.
ತನಿಖೆಯನ್ನು ಮುಂದುವರಿಸಿದಾಗ, 2018ರಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಸೋಮಶೇಖರ್ ಪ್ರಸ್ತುತ ಕಾರಾಗೃಹ ಇಲಾಖೆಯ ಉತ್ತರ ವಲಯದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೈದಿಯ ಬಿಡುಗಡೆ ಪ್ರಕ್ರಿಯೆಯಲ್ಲಿ ಸೋಮಶೇಖರ್ ಅವರ ಪಾತ್ರವಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿರುವ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ನಕಲಿ ಆದೇಶ ಸೃಷ್ಟಿಸಿದ ಬಗೆ, ಅದನ್ನು ಜೈಲಿನ ಅಧಿಕೃತ ದಾಖಲೆಗಳಲ್ಲಿ ಬಳಸಿದ ರೀತಿ ಹಾಗೂ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.