ಬೆಂಗಳೂರು, ಸೆ. 22 : ರಾಜ್ಯದಲ್ಲಿ ಮಳೆ ಕೊರತೆಯಿಂದ ನೈಸರ್ಗಿಕ ಬರ ಎದುರಾಗಿದ್ದರೆ, ಮತ್ತೊಂದೆಡೆ ಸರ್ಕಾರ ಆರ್ಥಿಕ ಬರವನ್ನೂ ಎದುರಿಸುತ್ತಿದೆ. ಖಜಾನೆ ಖಾಲಿಯಾಗಿ ಸರ್ಕಾರ ‘ಪಾಪರ್’ ಆಗುವ ಸ್ಥಿತಿಗೆ ತಲುಪಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದರು.
ವಿಧಾನಸಭೆಯಲ್ಲಿ ಬರದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯದ ಹಣಕಾಸು ಸ್ಥಿತಿ ಕುರಿತು ಆರ್ಥಿಕ ಇಲಾಖೆ ಬರೆದಿರುವ ಪತ್ರವನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬರ ಪರಿಸ್ಥಿತಿ ನಿಭಾಯಿಸಲು ಹಣದ ಅಗತ್ಯವಿದ್ದು, ಇತರ ಇಲಾಖೆಗಳ ಅನುದಾನ ಕಡಿತಗೊಳಿಸಿ ಹಣ ಹೊಂದಿಸುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.
ಇಂಧನ ಇಲಾಖೆಯೂ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ಅಶೋಕ ಹೇಳಿದಾಗ, ಇಂಧನ ಸಚಿವ ಕೆ.ಜೆ. ಜಾರ್ಜ್, ‘ನಮ್ಮ ಇಲಾಖೆಗೆ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ’ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಅಶೋಕ, ‘ಇದನ್ನು ನಾನು ಹೇಳುತ್ತಿಲ್ಲ, ಆರ್ಥಿಕ ಇಲಾಖೆಯೇ ಹೇಳುತ್ತಿದೆ’ ಎಂದು ಪ್ರತಿಕ್ರಿಯಿಸಿದರು.
ಈ ವೇಳೆ ಕಾಂಗ್ರೆಸ್ ಸದಸ್ಯರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿದರು. ಇದರಿಂದ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
ಗದಗ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿರುವ ಶಾಸಕ ಎಚ್.ಕೆ. ಪಾಟೀಲ ಅವರ ರಾಜೀನಾಮೆ ಎಚ್ಚರಿಕೆಯನ್ನೂ ಪ್ರಸ್ತಾಪಿಸಿದ ಅಶೋಕ, ‘ಕಾಂಗ್ರೆಸ್ ಶಾಸಕರೇ ಸರ್ಕಾರದ ತಪ್ಪನ್ನು ಎತ್ತಿ ತೋರಿಸಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.