ಹೊಸದಿಲ್ಲಿ, ಅ. 5 : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ನಮೂನೆ-6ರಲ್ಲಿನ ಬದಲಾವಣೆ ಕುರಿತ ವಿವಾದದ ನಡುವೆ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ನಡೆದುಕೊಂಡು ಸಿಇಸಿ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದಿದ್ದಾರೆ ಎಂದು ಪಕ್ಷ ಆರೋಪಿಸಿದೆ.
ಗ್ಯಾನೇಶ ಕುಮಾರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ ಸೋಮವಾರ ಕೇಂದ್ರ ಸರ್ಕಾರ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಸಿಇಸಿ ವಿರುದ್ಧ ತನ್ನ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿ, ನಮೂನೆ-6 ಅನ್ನು ಗ್ಯಾನೇಶ ಕುಮಾರ ಕಾನೂನುಬಾಹಿರವಾಗಿ ಹಾಗೂ ಏಕಪಕ್ಷೀಯವಾಗಿ ಬದಲಾಯಿಸಿದ್ದಾರೆ ಎಂಬುದು ಈಗ ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ.
“ಬಿಜೆಪಿಗೆ ನೆರವಾಗುವ ಉದ್ದೇಶದಿಂದ ಸಿಇಸಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕಿಲ್ಲ. ಪ್ರಜಾಪ್ರಭುತ್ವದ ವಿರುದ್ಧ ನಡೆದಿರುವ ಈ ಅಪರಾಧ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬರೂ ಉತ್ತರ ನೀಡಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್‌ಐಆರ್‌ಗೆ ಸಂಬಂಧಿಸಿದಂತೆ ನಮೂನೆ-6 ಜೊತೆಗಿನ ಘೋಷಣೆಯನ್ನು ಸುಪ್ರೀಂ ಕೋರ್ಟ ಎತ್ತಿಹಿಡಿದಿದೆ ಎಂದು ಚುನಾವಣಾ ಆಯೋಗ ಸೆಪ್ಟೆಂಬರ್ 26ರಂದು ನೀಡಿದ್ದ ಹೇಳಿಕೆಯ ಸ್ಕ್ರೀನ್‌ಶಾಟ್ ಅನ್ನೂ ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಕೂಡ ಸಿಇಸಿ ವಿರುದ್ಧ ಹರಿಹಾಯ್ದಿದ್ದು, “ಮುಖ್ಯ ಚುನಾವಣಾ ಆಯುಕ್ತರು ಬಹಿರಂಗವಾಗಿ ಸುಳ್ಳು ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಯುವ ಮತದಾರರ ಬಗ್ಗೆ ಭಯವಿದ್ದು, ಅದಕ್ಕಾಗಿಯೇ ನಮೂನೆ-6ರಲ್ಲಿ ಉದ್ದೇಶಪೂರ್ವಕವಾಗಿ ಬದಲಾವಣೆ ಮಾಡಿ ಯುವ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಜೈರಾಮ್ ರಮೇಶ್ ಮಾಡಿದ್ದಾರೆ.
ನಮೂನೆ-6 ಬದಲಾವಣೆ, ಎಸ್‌ಐಆರ್ ಪ್ರಕ್ರಿಯೆ ಮತ್ತು ಸಿಇಸಿ ಕಾರ್ಯವೈಖರಿ ಕುರಿತು ಈಗಾಗಲೇ ರಾಜಕೀಯ ವಿವಾದ ತೀವ್ರಗೊಂಡಿರುವ ನಡುವೆ ಸುಪ್ರೀಂ ಕೋರ್ಟ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.