LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು ಶಿಕ್ಷೆ, ₹10 ಕೋಟಿ ವರೆಗೆ ದಂಡ

ಹೊಸದಿಲ್ಲಿ, ಜುಲೈ 24: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ದೇಶದಲ್ಲಿ ತೀವ್ರ ಟೀಕೆ ಬಂದ ಹಿನ್ನೆಲೆಯಲ್ಲಿ  ಕೇಂದ್ರ ಸರ್ಕಾರ ತರಲಿರುವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಬಲಪಡಿಸುವ ಉದ್ದೇಶದ ಈ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಮೂಲಗಳ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಕೋಟಿ ವರೆಗೆ ದಂಡ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ. ಜೊತೆಗೆ, ಕನಿಷ್ಠ ಜೈಲು ಶಿಕ್ಷೆಯನ್ನು ಈಗಿನ ಮೂರು ವರ್ಷಗಳಿಂದ ಐದು ವರ್ಷಗಳಿಗೆ ಹೆಚ್ಚಿಸುವ ಪ್ರಸ್ತಾವವೂ ಒಳಗೊಂಡಿದೆ.

ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ನಡೆಯುತ್ತಿರುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಭದ್ರತೆಯನ್ನು ಇನ್ನಷ್ಟು ಬಲಪಡಿಸಬೇಕೆಂಬ ಒತ್ತಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಹಿತಾಸಕ್ತಿಗೆ ಸಂಬಂಧಿಸಿದ ಈ ಮಸೂದೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕಳೆದ ಐದು ದಿನಗಳಿಂದ ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಪ್ರಯತ್ನಿಸುತ್ತಿದ್ದರೂ, ವಿರೋಧ ಪಕ್ಷ ಅವಕಾಶ ನೀಡುತ್ತಿಲ್ಲ ಎಂದು ರಿಜಿಜು ಆರೋಪಿಸಿದರು. ಸಂಪುಟದ ಮಹತ್ವದ ನಿರ್ಧಾರವನ್ನು ಸದನದ ಮುಂದೆ ಮಂಡಿಸಲು ಸಚಿವರು ಸಿದ್ಧರಾಗಿದ್ದರೂ ಕಾಂಗ್ರೆಸ್‌ಗೆ ಚರ್ಚೆಯಲ್ಲಿ ಆಸಕ್ತಿಯಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅವರು ಕಿಡಿಕಾರಿದರು.

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ ಕೂಡ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿ, ಈ ವಿಷಯದ ಬಗ್ಗೆ ತಕ್ಷಣ ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿರುವುದನ್ನು ಉಲ್ಲೇಖಿಸಿದ ರಿಜಿಜು, ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ರಾಜಕೀಯಗೊಳಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.

ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ಬಲಿಷ್ಠ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಚರ್ಚೆಗೆ ಅಡ್ಡಿಪಡಿಸುವ ಬದಲು ಸಂಸತ್ತು ಸುಗಮವಾಗಿ ಕಾರ್ಯನಿರ್ವಹಿಸಲು ಎಲ್ಲ ಪಕ್ಷಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಪ್ರತಿನಿಧಿಗಳೊಂದಿಗೆ ಕೇಂದ್ರ ಸಚಿವರು ನಡೆಸಿದ ಮಾತುಕತೆಯ ಮರುದಿನವೇ ಸಚಿವ ಸಂಪುಟ ಈ ತೀರ್ಮಾನ ಕೈಗೊಂಡಿದೆ.

ಮಾತುಕತೆ ಬಳಿಕ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಕುರಿತು ತೀರ್ಮಾನ ಕೈಗೊಳ್ಳಲು ಕೇಂದ್ರವು ಶನಿವಾರ ಮಧ್ಯಾಹ್ನದವರೆಗೆ ಕಾಲಾವಕಾಶ ಕೋರಿದೆ ಎಂದು ಸಿಜೆಪಿ ನಾಯಕರು ತಿಳಿಸಿದ್ದಾರೆ. ನೀಟ್‌ ಅಭ್ಯರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಮತ್ತು ಇತರ ಪ್ರಕರಣಗಳನ್ನು ಹಿಂಪಡೆಯುವ ಬೇಡಿಕೆಗಳಿಗೆ ಕೇಂದ್ರವು ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಲಿಖಿತ ಭರವಸೆ ಪಡೆದ ಬಳಿಕ ಸೋನಮ್ ವಾಂಗ್ಚುಕ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದರು. ಅದರ ಬಳಿಕವೇ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಮಾತುಕತೆ ಆರಂಭವಾಗಿತ್ತು.

ಸಚಿವ ಸಂಪುಟ ಸಭೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ತ್ವರಿತ ನ್ಯಾಯಾಲಯಗಳ ಸ್ಥಾಪನೆ ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಬಂಧನೆಗಳನ್ನು ಒಳಗೊಂಡ ಕರಡು ಮಸೂದೆಯನ್ನು ಸರ್ಕಾರ ಪರಿಗಣಿಸಲಿದೆ ಎಂದೂ ಅವರು ತಿಳಿಸಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಅಕ್ರಮ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಮೆಲೋನಿ ಇನ್‌ಸ್ಟಾಗ್ರಾಂನಲ್ಲಿ ಮೋದಿ ರಾಜೀನಾಮೆಗೆ ಒತ್ತಾಯ; ವಿದ್ಯಾರ್ಥಿಗಳ ಅಭಿಯಾನ ವೈರಲ್ ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? : ಸಿ.ಟಿ. ರವಿಭೂಕುಸಿತದಿಂದ ಟಾಟಾ ಸುಮೋ ಮೇಲೆ ಬಿದ್ದ ಬಂಡೆ: 6 ತಿಂಗಳ ಮಗು ಸೇರಿ 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ಭ್ರಷ್ಟ ಸಚಿವ ಪ್ರಧಾನ್ ರಾಜೀನಾಮೆ ನೀಡುವವರೆಗೆ ಚರ್ಚೆಯಿಲ್ಲ: ರಾಹುಲ್ ಗಾಂಧಿಪ್ರಧಾನ್ ರಾಜೀನಾಮೆ ಕುರಿತು ನಾಳೆ ತೀರ್ಮಾನ; ಎರಡು ಬೇಡಿಕೆಗಳಿಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಸಿಜೆಪಿಪೆಲೆಟ್ ಗನ್ ಬಳಕೆ ಆರೋಪ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು ಶಿಕ್ಷೆ, ₹10 ಕೋಟಿ ವರೆಗೆ ದಂಡ