ಬೆಳಗಾವಿ, ಅ. ೮ (ಸಮದರ್ಶಿ ಸುದ್ದಿ): ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ಅದ್ದೂರಿಯಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹೧ ಕೋಟಿ ಅನುದಾನ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿನಾಡು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಉತ್ಸವದ ಸಂದರ್ಭದಲ್ಲಿ ಡಿಜೆ ಹಾಗೂ ಲೇಸರ್ ಲೈಟ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.
ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಡೆಸುವ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ನಿಷೇಧದ ನಡುವೆಯೂ ಕರಾಳ ದಿನಾಚರಣೆ ನಡೆಸಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಇದಕ್ಕೂ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ರಾಜ್ಯೋತ್ಸವ ಆಚರಣೆ ಕುರಿತು ಹಲವು ಸಲಹೆಗಳನ್ನು ನೀಡಿದರು.
ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಮಾತನಾಡಿ, ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಕನ್ನಡ ನಾಡಿನ ಅಧಿದೇವತೆ ತಾಯಿ ಭುವನೇಶ್ವರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಮಾತನಾಡಿ, ಬೆಳಗಾವಿಯಲ್ಲಿ ಜನಸ್ನೇಹಿ ಅಧಿಕಾರಿಗಳಿದ್ದಾರೆ. ವರ್ಷಕ್ಕೊಮ್ಮೆ ನಡೆಯುವ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಭಿಮಾನಿಗಳು ಸಂಭ್ರಮದಿಂದ ಆಚರಿಸಲು ಬೆಳಗಿನವರೆಗೂ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಮಹಾಂತೇಶ ರಣಗಟ್ಟಿಮಠ ಮಾತನಾಡಿ, ಗಣೇಶೋತ್ಸವದ ಸಂದರ್ಭದಲ್ಲಿ ಅಳವಡಿಸಲಾದ ಮರಾಠಿ ಭಾಷೆಯ ಬ್ಯಾನರ್‌ಗಳನ್ನು ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹುಕ್ಕೇರಿ ಸ್ವಾಮೀಜಿ ಮಾತನಾಡಿ, ಹಿಂದಿನ ವರ್ಷಗಳಂತೆ ಈ ಬಾರಿಯ ಕನ್ನಡ ರಾಜ್ಯೋತ್ಸವದಲ್ಲಿಯೂ ಸಾರ್ವಜನಿಕರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.
ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.