ಬೆಂಗಳೂರು, ಜೂ. 9 : ಕಾಂಗ್ರೆಸ್ ಸರಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಉಂಟಾಗಿದ್ದ ಅಸಮಾಧಾನ ಶಮನಗೊಂಡಿದೆ ಎನ್ನುವಷ್ಟರಲ್ಲೇ ಹೊಸ ಬೆಳವಣಿಗೆಯೊಂದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ಖಾತೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪ್ರಸ್ತುತ ರೂಪದಲ್ಲಿ ಸ್ವೀಕರಿಸಲು ಅವರು ನಿರಾಕರಿಸಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವನ್ನು ತಮ್ಮ ಇಲಾಖೆಯ ವ್ಯಾಪ್ತಿಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಈ ಕುರಿತು ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ರಣದೀಪ ಸಿಂಗ್ ಸುರ್ಜೇವಾಲ ಅವರ ಗಮನಕ್ಕೂ ವಿಷಯವನ್ನು ತಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈವರೆಗೆ ಯಾವುದೇ ಸ್ಪಷ್ಟ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ದಿಲ್ಲಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದಿಲ್ಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಕೆ.ಸಿ.ವೇಣುಗೋಪಾಲ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕೆಲ ಹಿರಿಯ ಸಚಿವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಎಚ್.ಮುನಿಯಪ್ಪ ಅವರಿಗೆ ಹಂಚಿಕೆ ಮಾಡಲಾದ ಖಾತೆಗಳ ಕುರಿತು ಅಸಮಾಧಾನ ಹೊರಹಾಕಿದ್ದರು.
ಬಳಿಕ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಅಸಮಾಧಾನಗೊಂಡ ಸಚಿವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಕೃಷ್ಣ ಬೈರೇಗೌಡ ಅವರ ಖಾತೆ ಸಂಬಂಧದ ಅಸಮಾಧಾನ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.