ಹೊಸದಿಲ್ಲಿ, ಸೆ. 15 : ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದಿಲ್ಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಲಾಲರ್ ಅವರು ₹50,000 ಜಾಮೀನು ಬಾಂಡ್ ಹಾಗೂ ಅಷ್ಟೇ ಮೊತ್ತದ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ‘ಕಾಕ್ರೋಚ್ ಜನತಾ ಪಾರ್ಟಿ’ ಕಾರ್ಯಕರ್ತರೊಬ್ಬರ ತಂದೆ ಎಂದು ತಿಳಿದುಬಂದಿದೆ.
ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 21 ವರ್ಷದ ಭಾರದ್ವಾಜ್‌ನನ್ನು ಬುಲಂದ್‌ಶಹರ್‌ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.
ಭಾರದ್ವಾಜ್ ನೀಡಿದ್ದ ಸಂದರ್ಶನವೊಂದು ವಿವಾದಕ್ಕೆ ಕಾರಣವಾಗಿತ್ತು. ಪ್ರತಿಭಟನೆಯ ವೇಳೆ ವಿದ್ಯಾರ್ಥಿ ಕಾರ್ಯಕರ್ತನ ತಂದೆಯ ‘ತಲೆ ಒಡೆದಿದ್ದೇನೆ’ ಹಾಗೂ ರಾಜಕೀಯ ಸಂಪರ್ಕಗಳಿಂದ ಬಂಧನದಿಂದ ತಪ್ಪಿಸಿಕೊಂಡಿದ್ದೇನೆ ಎಂದು ಆತ ಹೇಳಿಕೊಂಡಿದ್ದ ಎನ್ನಲಾಗಿದೆ. ನಂತರ ಆತ್ಮರಕ್ಷಣೆಗಾಗಿ ಹಲ್ಲೆ ನಡೆಸಿದ್ದಾಗಿ ಆತ ಸಮರ್ಥಿಸಿಕೊಂಡಿದ್ದನು.
ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳು ಹಾಗೂ ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಸೇರಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆಯಡಿಯೂ ಭಾರದ್ವಾಜ್ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಭಾರದ್ವಾಜ್ ಜೈಲಿನಲ್ಲಿರುವಾಗ ಆತನ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ವಕೀಲ ಪಿಯೂಷ ಜೈನ್ ಆತಂಕ ವ್ಯಕ್ತಪಡಿಸಿದ್ದು, ತಿಹಾರ್ ಜೈಲಿನಲ್ಲಿ ಸಮಗ್ರ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರ ಹಾಗೂ ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಒತ್ತಾಯಿಸಿದ್ದರು.