ಬೆಳಗಾವಿ, ನ. 18: ನಗರದ ಪ್ರತಿಷ್ಠಿತ ಪ್ರದೇಶಗಳಲ್ಲಿ ಒಂದಾದ ಆರ್ಪಿಡಿ ಕ್ರಾಸ್ನಲ್ಲಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ಆರ್ಪಿಡಿ ಕ್ರಾಸ್ನಲ್ಲಿರುವ ಡಿವೈನ್ ಸಲೂನ್ ಆ್ಯಂಡ್ ಸ್ಪಾದಲ್ಲಿ ಯುವತಿಯರಿಂದ ಪುರುಷರಿಗೆ ಬಾಡಿ ಮಸಾಜ್ ಮಾಡಿಸುವುದರ ಜತೆಗೆ ವೇಶ್ಯಾವಾಟಿಕೆಯನ್ನೂ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧರಿಸಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ನಾಯಕ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಕೇಂದ್ರದಲ್ಲಿದ್ದ ನಾಲ್ವರು ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದಾಳಿ ಸಂದರ್ಭದಲ್ಲಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ. ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಗುಜರಾತ್ ಹಾಗೂ ಮುಂಬಯಿ ಮೂಲದ ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಅಕ್ರಮ ದಂಧೆಯ ಹಿಂದೆ ಸ್ಪಾ ಮಾಲೀಕ ಹಾಗೂ ವ್ಯವಸ್ಥಾಪಕರ ಪಾತ್ರವಿರುವ ಶಂಕೆಯ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸಲೂನ್ ಹೆಸರಿನಲ್ಲಿ ನಡೆಯುತ್ತಿದ್ದ ದಂಧೆಯ ಜಾಲ ಹಾಗೂ ಯುವತಿಯರನ್ನು ಹೊರರಾಜ್ಯಗಳಿಂದ ಕರೆತಂದಿರುವ ಉದ್ದೇಶದ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಮುಂದಿನ ತನಿಖೆಗಾಗಿ ಸಿಸಿಬಿ ಪೊಲೀಸರು ಪ್ರಕರಣವನ್ನು ಟಿಳಕವಾಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಕ್ರಮ ದಂಧೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.