ಬೀದರ್, ಜೂ. 12 : ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಬೀದರ್ ಜಿಲ್ಲೆಯ ಇಬ್ಬರು ಸಹೋದರಿಯರು ಹೈದರಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತೋರ್ವ ಸಹೋದರಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಮೂಲದ ಭವಾನಿ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟವರು. ಇವರ ಸಹೋದರಿ ವಿಜಯಶ್ರೀ ಮೇತ್ರೆ (19) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಜೂನ್ 8ರಂದು ಕುಟುಂಬದ ಸದಸ್ಯರು ಮನೆಯಲ್ಲೇ ಊಟ ಮಾಡಿದ ಬಳಿಕ ಸಂಬಂಧಿಕರು ತಂದಿದ್ದ ಮಾವಿನ ಹಣ್ಣುಗಳನ್ನು ಸೇವಿಸಿದ್ದರು ಎನ್ನಲಾಗಿದೆ. ಹಣ್ಣು ಸೇವಿಸಿದ ಕೆಲವೇ ಸಮಯದಲ್ಲಿ ಕುಟುಂಬದ ಹಲವರಿಗೆ ವಾಂತಿ, ಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದೆ.
ಅಸ್ವಸ್ಥಗೊಂಡ ಎಲ್ಲರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಹಾಗೂ ಸಂಧ್ಯಾರಾಣಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಹಿಂದೆ ವಿಷಕಾರಿ ಅಂಶಗಳ ಬಳಕೆ ಇದೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಮರಣದ ನಿಖರ ಕಾರಣ ತಿಳಿಯಲು ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಹೊರತರಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅಲ್ಲದೆ, ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ಆರ್ಥಿಕ ನೆರವು ನೀಡುವಂತೆಯೂ ಮನವಿ ಮಾಡಿದ್ದಾರೆ.
ಈ ಸಂಬಂಧ ನಾರಾಯಣಗುಡ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಹಾಗೂ ತನಿಖೆಯ ಬಳಿಕ ಘಟನೆಯ ನಿಖರ ಕಾರಣ ಬಹಿರಂಗವಾಗುವ ನಿರೀಕ್ಷೆಯಿದೆ.