‘ಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ’: ಪ್ರಿಯಾಂಕ್ ಖರ್ಗೆ
ಕಲಬುರಗಿ, ಸೆ 1 : (ಸಮದರ್ಶಿ ಸುದ್ದಿ) - ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿಕೆಟ್ ಬೀಳಲಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ–ಜೆಡಿಎಸ್ ನಾಯಕರು ಹಾಕುವ ನೋಬಾಲ್ ಮತ್ತು ಫುಲ್‌ಟಾಸ್‌ಗಳಿಂದ ತಮ್ಮ ವಿಕೆಟ್ ಬೀಳುವುದಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೌಲರ್‌ಗಳು ಹೇಗಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅವರು ಹಾಕುವ ನೋಬಾಲ್ ಹಾಗೂ ಫುಲ್‌ಟಾಸ್‌ಗೆ ವಿಕೆಟ್ ಬೀಳುವುದಿಲ್ಲ. ಅಂಪೈರ್ ಯಾರೇ ಇದ್ದರೂ ಅಂತಿಮವಾಗಿ ವಿಕೆಟ್ ಬೀಳುವುದು ಬಿಜೆಪಿ–ಜೆಡಿಎಸ್ ನಾಯಕರದ್ದೇ ಎಂದು ಟೀಕಿಸಿದರು.
ಕೆಪಿಎಸ್‌ಸಿ ಪ್ರಕರಣದ ಕುರಿತು ಮಾತನಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲ ಎಂದು ಆರೋಪಿಸಿದ ಅವರು, ಪ್ರಕರಣದಲ್ಲಿ ಮಧ್ಯವರ್ತಿಯೊಬ್ಬ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಪಾತ್ರದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಈ ಕುರಿತು ಬಿಜೆಪಿ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
‘ದಾಖಲೆಗಳಿದ್ದರೆ ಬಹಿರಂಗಪಡಿಸಿ’
ತಾವು ಯಾವುದೇ ತಪ್ಪು ಮಾಡಿದ್ದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಮಂಡಲದ ಸದನದಲ್ಲಿ ಈ ವಿಚಾರವನ್ನು ಚರ್ಚಿಸಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಬಗ್ಗೆ ಬಿಜೆಪಿ–ಜೆಡಿಎಸ್ ನಾಯಕರು ಏಕೆ ಮಾತನಾಡುತ್ತಿಲ್ಲ? ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಯಾರು ಎಂಬುದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆಪಿಎಸ್‌ಸಿ ವಿಚಾರದಲ್ಲಿ ಶಿವಶಂಕರಪ್ಪ ಅವರ ಬಗ್ಗೆ ಮಾತನಾಡಬೇಕು. ತಮ್ಮ ವಿರುದ್ಧ ಆರೋಪ ಮಾಡುವ ಬದಲು ಪ್ರಕರಣದ ಮೂಲ ವಿಚಾರಗಳ ಕುರಿತು ಚರ್ಚಿಸಲಿ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಬಿಜೆಪಿ ನಾಯಕರಾದ ಆರ್. ಅಶೋಕ, ಬಿ.ವೈ. ವಿಜಯೇಂದ್ರ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ತಮ್ಮ ವಿರುದ್ಧ ಕೆಪಿಎಸ್‌ಸಿಗೆ ಸಂಬಂಧಿಸಿದ ಯಾವುದೇ ದಾಖಲೆ ಅಥವಾ ಮಾಹಿತಿ ಇದ್ದರೆ ಅದನ್ನು ಬಹಿರಂಗಪಡಿಸಲಿ. ಎಲ್ಲ ಆರೋಪಗಳಿಗೂ ಉತ್ತರಿಸಲು ತಾವು ಸಿದ್ಧ ಎಂದು ಸವಾಲು ಹಾಕಿದರು.
ಪೊಲೀಸ್ ಇಲಾಖೆಯ ಸುಧಾರಣೆಗೆ ಕ್ರಮ
ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನೂರಾರು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಕೆಲವೇ ಮಂದಿಯಿಂದ ನಡೆಯುವ ತಪ್ಪು ಘಟನೆಗಳು ಹೆಚ್ಚು ಪ್ರಚಾರ ಪಡೆಯುತ್ತವೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಪ್ರಕರಣ ದಾಖಲಿಸುವುದು ಒಂದು ವಿಚಾರ. ಆದರೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಮೇಲೆಯೇ ಎಫ್‌ಐಆರ್ ದಾಖಲಿಸುವುದು ಸರಿಯೇ ಎಂದು ಪ್ರಶ್ನಿಸಿದರು.
ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧ ಪ್ರಕರಣ ದಾಖಲಿಸುವಂತಹ ಪರಿಸ್ಥಿತಿ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.
ಝೀರೋ ಟ್ರಾಫಿಕ್ ಸೌಲಭ್ಯವನ್ನು ತಾವು ಕೇಳಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಿಯಾಂಕ್ ಖರ್ಗೆ, ಈ ವಿಚಾರದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲರಿಗೆ ಏನು ತೊಂದರೆಯಾಗಿದೆ ಎಂಬುದು ಗೊತ್ತಿಲ್ಲ ಎಂದರು. ಅವರು ಗೃಹ ಸಚಿವರಾಗಿದ್ದಾಗ ಜನಸಂದಣಿಯಲ್ಲೇ ಸಂಚರಿಸುತ್ತಿದ್ದರೇ? ಯಾವುದೇ ಆಧಾರವಿಲ್ಲದೆ ವಿಚಾರಗಳನ್ನು ಪ್ರಸ್ತಾಪಿಸುವುದರಿಂದ ಪ್ರಯೋಜನವಿಲ್ಲ ಎಂದು ತಿರುಗೇಟು ನೀಡಿದರು.