ಬೆಂಗಳೂರು, ಮೇ ೨೭ : ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ನಾಯಕತ್ವ ಬದಲಾವಣೆಯಾಗಬಹುದು ಎಂಬ ತೀವ್ರ ಊಹಾಪೋಹಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮುಖ್ಯಮಂತ್ರಿ ಕಚೇರಿ ಮೂಲಗಳು ಬುಧವಾರ ಈ ಮಾಹಿತಿಯನ್ನು ನೀಡಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ಜೋರಾಗಿವೆ.
ಹೌದು, ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ ಎಂದು ಮುಖ್ಯಮಂತ್ರಿಯ ಆಪ್ತ ಮೂಲಗಳು ಪಿಟಿಐಗೆ ತಿಳಿಸಿವೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯನ್ನೂ ತಳ್ಳಿಹಾಕಲಾಗುವುದಿಲ್ಲ ಎನ್ನಲಾಗಿದೆ.
ಇದರ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಅವರೊಂದಿಗೆ ಹಲವು ಸುತ್ತಿನ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಬಳಿಕ ರಾಜ್ಯ ನಾಯಕತ್ವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.