ಹಾವೇರಿ, ಅ. 14 (ಸಮದರ್ಶಿ ಸುದ್ದಿ): ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಟೋಲ್ಗೇಟ್ ಬಳಿ ಸಾವಿರಾರು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಂಗಳವಾರ ರಾತ್ರಿಯಿಂದಲೇ ನೂರಾರು ಲಾರಿ, ಬಸ್ ಹಾಗೂ ಇತರ ವಾಹನಗಳು ಹೆದ್ದಾರಿಯುದ್ದಕ್ಕೂ ಸಾಲುಗಟ್ಟಿ ನಿಂತಿವೆ. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಹಾವೇರಿ ನಗರದ ಹೊರವಲಯದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ವಾಹನಗಳ ಉದ್ದನೆಯ ಸಾಲು ಕಂಡುಬಂದಿದ್ದು, ದೂರದ ಊರುಗಳಿಗೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. ಕೆಲ ವಾಹನ ಚಾಲಕರು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಲು ಮುಂದಾಗಿದ್ದಾರೆ.
ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಪಟ್ಟುಹಿಡಿದಿದ್ದು, ಹೆದ್ದಾರಿ ತಡೆಯಿಂದಾಗಿ ಸರಕು ಸಾಗಣೆ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೂ ತೀವ್ರ ಅಡಚಣೆ ಉಂಟಾಗಿದೆ.