ನಾಗ್ಪುರ, ಅ. 15: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿಜಯದಶಮಿ ಸಮಾರಂಭಕ್ಕೆ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಇಸ್ರೇಲ್ ಕಾನ್ಸುಲ್ ಜನರಲ್ ಅವರನ್ನು ಆಹ್ವಾನಿಸಲಾಗಿದ್ದು, ಈ ಬೆಳವಣಿಗೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ನಾಗ್ಪುರದ ರೇಶಿಮ್ಬಾಗ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಬುಧವಾರ ಪ್ರಕಟಿಸಿದ ಅಧಿಕೃತ ಪ್ರಕಟಣೆ ತಿಳಿಸಿದೆ. ‘ದೈನಿಕ್ ಜಾಗರಣ್’ ಪತ್ರಿಕೆಯ ಪ್ರಧಾನ ಸಂಪಾದಕ ಸಂಜಯ್ ಗುಪ್ತಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
2025ರ ಜುಲೈನಲ್ಲಿ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ ಆರ್ಎಸ್ಎಸ್ ಆಹ್ವಾನ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಈ ಬೆಳವಣಿಗೆಯನ್ನು ಟೀಕಿಸಿರುವ ಕಾಂಗ್ರೆಸ್, ಆಡಳಿತ ವ್ಯವಸ್ಥೆಯೊಳಗಿನವರೇ ಪರಸ್ಪರ ಸಂಘರ್ಷದಲ್ಲಿ ತೊಡಗಿದ್ದಾರೆ ಎಂದು ವ್ಯಂಗ್ಯವಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, ಧನಕರ್ ಅವರಿಗೆ ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಆಹ್ವಾನ ದೊರೆತಿದೆ. ಆದರೆ, ಕಳೆದ ವರ್ಷ ಜುಲೈನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರಿಗೆ ಕಾನೂನುಬದ್ಧವಾಗಿ ದೊರೆಯಬೇಕಾದ ನಿವಾಸವನ್ನು ಕೇಂದ್ರ ಸರ್ಕಾರ ಇನ್ನೂ ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ.