ಬೆಳಗಾವಿ, ಅ. 30: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ಶನಿವಾರ ಕರೆ ನೀಡಿರುವ ರಾಷ್ಟ್ರೀಯ ಹೆದ್ದಾರಿ ಬಂದ್ ಪ್ರತಿಭಟನೆಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದು, ಟೋಲ್‌ಪ್ಲಾಜಾಗಳಲ್ಲಿ ಪ್ರತಿಭಟನೆ ನಡೆಸುವುದು ಹಾಗೂ ರಸ್ತೆ ತಡೆ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತ ಸಂಘಟನೆಗಳು ಹೋರಾಟ ತೀವ್ರಗೊಳಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಶನಿವಾರ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲಾಧಿಕಾರಿಗಳಿಗೆ ಪತ್ರ ಬಂದ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆ ನಡೆಸುವಂತಿಲ್ಲ. ಹೆದ್ದಾರಿಗಳಲ್ಲಿ ವಾಹನಗಳನ್ನು ತಡೆದು ಸಂಚಾರ ಸ್ಥಗಿತಗೊಳಿಸುವುದು ಹಾಗೂ ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಜಿಲ್ಲೆಯ ಮೂರು ಟೋಲ್‌ಪ್ಲಾಜಾಗಳಲ್ಲಿಯೂ ಪ್ರತಿಭಟನೆ ನಡೆಸುವಂತಿಲ್ಲ. ಟೋಲ್ ಸಂಗ್ರಹ ಪ್ರಕ್ರಿಯೆ ಹಾಗೂ ಟೋಲ್‌ಪ್ಲಾಜಾಗಳ ದೈನಂದಿನ ಕಾರ್ಯಾಚರಣೆಗೆ ಯಾವುದೇ ರೀತಿಯ ಅಡ್ಡಿಪಡಿಸಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಟ್ರ್ಯಾಕ್ಟರ್ ಸೇರಿದಂತೆ ಯಾವುದೇ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ಸಂಚಾರ ತಡೆಯುವಂತಿಲ್ಲ. ಪ್ರತಿಭಟನೆಯ ಹೆಸರಿನಲ್ಲಿ ರಸ್ತೆ ಬಂದ್ ಮಾಡುವುದು ಅಥವಾ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟುಮಾಡುವುದಕ್ಕೂ ನಿರ್ಬಂಧ ಹೇರಲಾಗಿದೆ.
ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿ ಉಂಟುಮಾಡಬಾರದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ರೈತ ಸಂಘಟನೆಗಳು ಹೆದ್ದಾರಿ ಬಂದ್‌ಗೆ ಸಿದ್ಧತೆ ನಡೆಸುತ್ತಿರುವ ನಡುವೆಯೇ ಜಿಲ್ಲಾಡಳಿತ ನಿರ್ಬಂಧದ ಆದೇಶ ಹೊರಡಿಸಿರುವುದರಿಂದ ಶನಿವಾರದ ಪ್ರತಿಭಟನೆ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.