ಹೊಸದಿಲ್ಲಿ, ಜುಲೈ 31: ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆದಿಲ್ಲ ಎಂದು ಲೋಕಸಭೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಹಕ್ಕುಚ್ಯುತಿ ನಿರ್ಣಯ ಮಂಡಿಸಿವೆ.
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ಲೋಕಸಭೆಯ ಕಾರ್ಯವಿಧಾನ ಮತ್ತು ವ್ಯವಹಾರ ನಿರ್ವಹಣಾ ನಿಯಮ 222ರ ಅಡಿಯಲ್ಲಿ ಈ ಕುರಿತು ನೋಟಿಸ್ ಸಲ್ಲಿಸಿದ್ದು, ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಹಕ್ಕುಚ್ಯುತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಜುಲೈ 20ರಂದು ನಡೆದ ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿದ್ದರೂ, ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಸಚಿವರು ಲೋಕಸಭೆಯಲ್ಲಿ ಹೇಳುವ ಮೂಲಕ ಸದನವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.
ಜುಲೈ 29ರಂದು ‘ಸಾರ್ವಜನಿಕ ಪರೀಕ್ಷೆಗಳು (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026’ ಕುರಿತ ಚರ್ಚೆಗೆ ಉತ್ತರಿಸುತ್ತಾ, “ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಅಶ್ರುವಾಯು ಮಾತ್ರ ಬಳಸಲಾಗಿದೆ. ಗುಂಡಿನ ದಾಳಿಯೇ ನಡೆಯದಿದ್ದಾಗ ಆದೇಶದ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಜಿತೇಂದ್ರ ಸಿಂಗ್ ಹೇಳಿದ್ದರು.
ಈ ಹೇಳಿಕೆ ವಾಸ್ತವಾಂಶಗಳಿಗೆ ವಿರುದ್ಧವಾಗಿದೆ ಎಂದು ಕೆ.ಸಿ. ವೇಣುಗೋಪಾಲ್ ತಮ್ಮ ನೋಟಿಸ್‌ನಲ್ಲಿ ವಾದಿಸಿದ್ದು, ಸಂಸತ್ತಿಗೆ ತಪ್ಪು ಮಾಹಿತಿ ನೀಡುವುದು ಹಕ್ಕುಚ್ಯುತಿ ಹಾಗೂ ಸದನದ ಅವಮಾನಕ್ಕೆ ಸಮಾನವಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ತಮ್ಮ ಸಾಮಾಜಿಕ ಜಾಲತಾಣದ ಸಂದೇಶದಲ್ಲಿ ಕೆ.ಸಿ. ವೇಣುಗೋಪಾಲ್, ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆ ಕುರಿತು ಸಂಸತ್ತಿನಲ್ಲಿ "ಯಾವುದೇ ಗುಂಡಿನ ದಾಳಿ ನಡೆದಿಲ್ಲ" ಎಂದು ಸಚಿವರು ಬಹಿರಂಗವಾಗಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಧ್ಯಮಗಳ ಎದುರೇ ಪೆಲೆಟ್ ಗನ್ ದಾಳಿಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಭೇಟಿಯಾಗಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಘಟನೆಗೆ ಸಂಬಂಧಿಸಿದ ಸಾಕಷ್ಟು ದೃಶ್ಯ ಹಾಗೂ ಸಾಕ್ಷ್ಯಗಳು ಲಭ್ಯವಿದ್ದರೂ ಸಚಿವರು ಸದನವನ್ನು ದಾರಿ ತಪ್ಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
