ಬೆಂಗಳೂರು, ಮೇ 15 : ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸುತ್ತಿದ್ದು, ಈ ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಬಳಿಕ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಿಸುವ ಸಾಧ್ಯತೆ ಇತ್ತು. ನಿರೀಕ್ಷೆಯಂತೆಯೇ ಈಗ ದರ ಏರಿಕೆ ಮಾಡಲಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಪೆಟ್ರೋಲ್ ದರ ಕಡಿಮೆಯಿದ್ದರೂ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಬಾರಿ ಇಂಧನ ದರ ಹೆಚ್ಚಿಸಿದೆ ಎಂದು ಟೀಕಿಸಿದರು.
ಈ ದರ ಏರಿಕೆಯು ಜನಸಾಮಾನ್ಯರ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರ ಜೊತೆಗೆ ಕಾರ್ಮಿಕರು, ರೈತರು ಹಾಗೂ ಬಡವರ ಬದುಕಿನ ಮೇಲೂ ಹೆಚ್ಚಿನ ಹೊರೆ ತರಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುತ್ತಿದ್ದು, ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ ಎಂದು ತಿಳಿಸಿದರು.
ಪ್ರಧಾನಿ ಮೋದಿ ಅಧಿಕಾರಕ್ಕೆ ಬರುವ ಮುನ್ನ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ₹413 ಇತ್ತು. ಈಗ ಅದು ₹1000 ದಾಟಿದೆ. ಇಂಧನ ದರ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಲಿದ್ದು, ಜನಜೀವನ ಮತ್ತಷ್ಟು ಅಸ್ತವ್ಯಸ್ತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಸಂದರ್ಭದಲ್ಲೇ ಬೆಲೆ ಏರಿಕೆ ಮಾಡಿರುವುದು ಜನರಿಗೆ ಹೆಚ್ಚುವರಿ ಸಂಕಷ್ಟ ತಂದೊಡ್ಡಲಿದೆ ಎಂದು ಹೇಳಿದರು.
ನೀಟ್-ಯುಜಿ ಮರು ಪರೀಕ್ಷೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗುತ್ತಿರುವ ಕುರಿತು ಮಾತನಾಡಿದ ಅವರು, ಚುನಾವಣಾ ಆಯೋಗದಿಂದ ಪ್ರಕ್ರಿಯೆ ಆರಂಭವಾಗಿದ್ದು, ಅಗತ್ಯ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.