ಬೆಂಗಳೂರು, ಜೂ. 1 : ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕೆಂಬ ಒತ್ತಾಯ ಹೆಚ್ಚಾಗಿದೆ. ಮುಂಬರುವ ಚುನಾವಣೆಯಲ್ಲಿ ಕನಿಷ್ಠ ಎರಡು ವಿಧಾನ ಪರಿಷತ್ ಸ್ಥಾನಗಳು ಹಾಗೂ ಒಂದು ರಾಜ್ಯಸಭಾ ಸ್ಥಾನವನ್ನು ಮುಸ್ಲಿಮ್ ಸಮುದಾಯಕ್ಕೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದೆ.
ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಹಾಗೂ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಜೂ. 18ರಂದು ಚುನಾವಣೆ ನಡೆಯಲಿದೆ. ವಿಧಾನ ಪರಿಷತ್‌ನ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಈ ನಾಲ್ಕು ಸ್ಥಾನಗಳ ಪೈಕಿ ಕನಿಷ್ಠ ಎರಡು ಸ್ಥಾನಗಳನ್ನು ಮುಸ್ಲಿಮ್ ಮುಖಂಡರಿಗೆ ನೀಡಬೇಕು. ಜೊತೆಗೆ ರಾಜ್ಯಸಭೆಯಲ್ಲಿಯೂ ಕನಿಷ್ಠ ಒಂದು ಸ್ಥಾನವನ್ನು ಮುಸ್ಲಿಮ್ ಸಮುದಾಯಕ್ಕೆ ಮೀಸಲಿಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
ಪ್ರಸ್ತುತ ವಿಧಾನ ಪರಿಷತ್‌ನ ಒಟ್ಟು 75 ಸದಸ್ಯರ ಪೈಕಿ ಕೇವಲ ನಾಲ್ವರು ಮಾತ್ರ ಮುಸ್ಲಿಮರು ಇದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರ ಪ್ರಮಾಣ ಶೇ.13ರಷ್ಟಿದ್ದು, ಅದರ ಅನುಪಾತದಲ್ಲಿ ಕನಿಷ್ಠ 9 ರಿಂದ 10 ಸದಸ್ಯರ ಪ್ರಾತಿನಿಧ್ಯ ಇರಬೇಕಾಗಿತ್ತು. ಆದರೆ ಈಗಿರುವ ಸಂಖ್ಯೆ ಅದರ ಅರ್ಧಕ್ಕೂ ಕಡಿಮೆ ಎಂದು ಒಕ್ಕೂಟ ತಿಳಿಸಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿಧಾನ ಪರಿಷತ್‌ನ 15 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಅವಕಾಶ ದೊರೆತಿತ್ತು. ಈ ಅವಧಿಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸುವ ಅವಕಾಶ ಇದ್ದರೂ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. 2025ರಲ್ಲಿ ನಡೆದ ನಾಲ್ಕು ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನದಲ್ಲಿಯೂ ಒಬ್ಬ ಮುಸ್ಲಿಮರಿಗೂ ಅವಕಾಶ ನೀಡಲಾಗಿಲ್ಲ ಎಂದು ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯದ 12 ರಾಜ್ಯಸಭಾ ಸದಸ್ಯರ ಪೈಕಿ ಒಬ್ಬರು ಮಾತ್ರ ಮುಸ್ಲಿಮರಾಗಿದ್ದಾರೆ. ಹಿಂದೆ ಕಾಂಗ್ರೆಸ್‌ನಿಂದ ಕನಿಷ್ಠ ಇಬ್ಬರು ಮುಸ್ಲಿಮ್ ಲೋಕಸಭಾ ಸದಸ್ಯರು ಆಯ್ಕೆಯಾಗುತ್ತಿದ್ದರು. ಆದರೆ ಪ್ರಸ್ತುತ ಲೋಕಸಭೆಯಲ್ಲಿ ಕರ್ನಾಟಕದಿಂದ ಒಬ್ಬರೂ ಮುಸ್ಲಿಮ್ ಸಂಸದರು ಇಲ್ಲ. ಕಾಂಗ್ರೆಸ್ ನೀಡುವ ಲೋಕಸಭಾ ಟಿಕೆಟ್‌ಗಳ ಸಂಖ್ಯೆಯೂ ಒಂದಕ್ಕೆ ಸೀಮಿತವಾಗಿದೆ. ಇದರಿಂದ ಸಂಸತ್ತಿನಲ್ಲಿ ರಾಜ್ಯದ ಮುಸ್ಲಿಮ್ ಸಮುದಾಯದ ಪ್ರಾತಿನಿಧ್ಯ ಗಣನೀಯವಾಗಿ ಕುಸಿದಿದೆ ಎಂದು ಒಕ್ಕೂಟ ಕಳವಳ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಮುಸ್ಲಿಮ್ ಸಮುದಾಯದ ಬೆಂಬಲ ಮಹತ್ವದ ಪಾತ್ರ ವಹಿಸಿದೆ. ಸಮುದಾಯದ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿ ಪಕ್ಷ ಅಧಿಕಾರಕ್ಕೆ ಬರಲು ನೆರವಾಗಿದ್ದಾರೆ. ಆದರೂ ಸಚಿವ ಸಂಪುಟ, ವಿಧಾನ ಪರಿಷತ್, ಆಡಳಿತ ವ್ಯವಸ್ಥೆ, ವಿಶ್ವವಿದ್ಯಾಲಯಗಳು, ನಿಗಮ-ಮಂಡಳಿಗಳು ಹಾಗೂ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಅವರ ಜನಸಂಖ್ಯೆ ಮತ್ತು ಪಕ್ಷಕ್ಕೆ ನೀಡಿರುವ ಬೆಂಬಲಕ್ಕೆ ಅನುಗುಣವಾಗಿ ಇಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ ಎರಡು ಸ್ಥಾನಗಳನ್ನು ಹಾಗೂ ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಸ್ಥಾನವನ್ನು ಮುಸ್ಲಿಮ್ ಸಮುದಾಯಕ್ಕೆ ನೀಡುವ ಮೂಲಕ ಪ್ರಾತಿನಿಧ್ಯದ ಕೊರತೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಲಾಗಿದೆ.
ಇತ್ತೀಚೆಗೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಸಂಘಟನಾ ರಚನೆಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅವಕಾಶ ಮತ್ತು ಭಾಗವಹಿಸುವಿಕೆ ಕಲ್ಪಿಸುವ ಕುರಿತು ನೀಡಿರುವ ಸಂದೇಶಕ್ಕೂ ಇದು ಪೂರಕವಾಗಲಿದೆ ಎಂದು ಒಕ್ಕೂಟ ಹೇಳಿದೆ.
ಈ ಕುರಿತು ಕರ್ನಾಟಕ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಪರವಾಗಿ ಸುಹೇಲ್ ಅಹ್ಮದ ಮರೂರ್, ತನ್ವಿರ ಅಹ್ಮದ ಹಾಗೂ ಯಹ್ಯಾ ದಾಮೂದಿ ಜಂಟಿ ಪ್ರಕಟಣೆಯಲ್ಲಿ ತಮ್ಮ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ.