ಬೆಂಗಳೂರು, ನ. 14: ಪೆಟ್ರೋಲ್ನಲ್ಲಿ ಮಿಶ್ರಣ ಮಾಡಲಾಗಿರುವ ಎಥೆನಾಲ್ ಪ್ರಮಾಣವನ್ನು ಗ್ರಾಹಕರಿಗೆ ಸ್ಪಷ್ಟವಾಗಿ ತಿಳಿಸಲು ರಾಜ್ಯದ ಪೆಟ್ರೋಲ್ ಬಂಕ್ಗಳಲ್ಲಿ ಡಿಜಿಟಲ್ ಫಲಕಗಳ ಮೂಲಕ ಮಾಹಿತಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಪೆಟ್ರೋಲ್ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಆರೋಪ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣದ ಬಗ್ಗೆ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಮುಂದಾಗಿದೆ.
ಪೆಟ್ರೋಲ್ ಬಂಕ್ಗಳಲ್ಲಿ ಮಾರಾಟವಾಗುವ ಇಂಧನದಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣವಾಗಿದೆ ಎಂಬ ಮಾಹಿತಿಯನ್ನು ಡಿಜಿಟಲ್ ಫಲಕಗಳಲ್ಲಿ ಪ್ರದರ್ಶಿಸುವುದರ ಜತೆಗೆ, ಗ್ರಾಹಕರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲು ಚಿಂತನೆ ನಡೆಸಲಾಗಿದೆ.
ರಾಜ್ಯದಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಪತ್ರ ಬರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಎಥೆನಾಲ್ ಮಿಶ್ರಣದ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸದಿದ್ದರೆ, ರಾಜ್ಯದ ವಿವಿಧ ಪೆಟ್ರೋಲ್ ಬಂಕ್ಗಳಿಂದ ಮತ್ತೊಮ್ಮೆ ಇಂಧನದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲು ಸರ್ಕಾರ ಮುಂದಾಗಲಿದೆ. ಪರೀಕ್ಷಾ ವರದಿಗಳನ್ನು ಸಾರ್ವಜನಿಕರ ಮುಂದಿಡುವ ಪ್ರಯತ್ನವನ್ನೂ ಮಾಡಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಇದಲ್ಲದೆ, ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಸೇರಿದಂತೆ ಇಂಧನದ ಗುಣಮಟ್ಟ ಹಾಗೂ ಇತರ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ಪ್ರತ್ಯೇಕ ಅಂತರ್ಜಾಲ ದೂರು ವೇದಿಕೆ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕ್ರಮಗಳಿಂದ ಇಂಧನ ಮಾರಾಟದಲ್ಲಿ ಪಾರದರ್ಶಕತೆ ಹೆಚ್ಚಿಸುವುದರ ಜತೆಗೆ ಗ್ರಾಹಕರಿಗೆ ತಾವು ಖರೀದಿಸುವ ಪೆಟ್ರೋಲ್ನಲ್ಲಿರುವ ಎಥೆನಾಲ್ ಪ್ರಮಾಣದ ಬಗ್ಗೆ ಮಾಹಿತಿ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ.