ಬೆಂಗಳೂರು, ಮೇ 1 : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯ ಅಪಹರಣ ಆರೋಪದ ಪ್ರಕರಣದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಿಂಪಡೆದಿದ್ದಾರೆ.
ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಆಧಾರದಲ್ಲಿ ಮೈಸೂರು ಜಿಲ್ಲೆಯ ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿಶೇಷ ತನಿಖಾ ದಳ ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ನಡೆಸಿತು.
ರೇವಣ್ಣ ಪರ ವಕೀಲ ಬಿ.ಎಂ. ಗಿರೀಶ್ ಕುಮಾರ್ ಸಲ್ಲಿಸಿದ ಮೆಮೊವನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿತು. ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ ಎಂದು ತಿಳಿಸಿ, ಎಲ್ಲಾ ವಾದಗಳನ್ನು ಮುಕ್ತವಾಗಿರಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಇದಕ್ಕೂ ಮೊದಲು, 2025ರ ಜನವರಿ 17ರಂದು ವಿಚಾರಣಾ ನ್ಯಾಯಾಲಯದಲ್ಲಿ ಆರೋಪ ನಿಗದಿಪಡಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಬಳಿಕ ರೇವಣ್ಣ ಪರ ವಕೀಲರು ಹಲವು ಬಾರಿ ವಿಚಾರಣೆ ಮುಂದೂಡಿಕೆ ಕೋರಿದ್ದರು. ಈ ಹಿನ್ನೆಲೆ 2026ರ ಫೆಬ್ರವರಿ 5ರಂದು ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿತ್ತು. ಇದೀಗ, ರೇವಣ್ಣ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ