ಹೊಸದಿಲ್ಲಿ, ಅ. 9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುನ್ನ ರೈಲುಗಳ ಸಂಚಾರ ರದ್ದುಗೊಳಿಸಿರುವ ಕ್ರಮವನ್ನು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಯುವಜನರ ಪ್ರತಿಭಟನೆಗೆ ಸರ್ಕಾರ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಶನಿವಾರ ಸಿಜೆಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಹೋರಾಟದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಯುವಕರು ದೆಹಲಿಗೆ ಆಗಮಿಸುವುದನ್ನು ತಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ದೀಪ್ಕೆ ಆರೋಪಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಅಕ್ಟೋಬರ್ 10ರಂದು ಬೆಳಿಗ್ಗೆ 4ರಿಂದ ಮಧ್ಯಾಹ್ನ 2ರವರೆಗೆ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಆಗಮಿಸಬೇಕಿದ್ದ ಕೆಲವು ಮೇಲ್ ಹಾಗೂ ಎಕ್ಸ್‌ಪ್ರೆಸ್ ರೈಲುಗಳನ್ನು ರೈಲ್ವೆ ಮಂಡಳಿ ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ಇದರ ಜತೆಗೆ ದೆಹಲಿಯ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ಪೊಲೀಸರು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (ಡಿಎಂಆರ್‌ಸಿ) ಸೂಚಿಸಿರುವ ವರದಿಗಳೂ ಹೊರಬಿದ್ದಿವೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುವ ಯುವಕರ ಸಂಚಾರಕ್ಕೆ ಅಡ್ಡಿಪಡಿಸುವ ಉದ್ದೇಶದಿಂದಲೇ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಜೆಪಿ ಆರೋಪಿಸಿದೆ.
ಈ ಬೆಳವಣಿಗೆಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಭಿಜೀತ್ ದೀಪ್ಕೆ, ಜಂತರ್ ಮಂತರ್ ಪ್ರತಿಭಟನೆ ನಡೆಸಲು ಗೊತ್ತುಪಡಿಸಿರುವ ಸ್ಥಳವಾಗಿದ್ದು, ಅಲ್ಲಿ ಶಾಂತಿಯುತವಾಗಿ ಪ್ರತಿಭಟಿಸಲು ಸರ್ಕಾರದ ಅನುಮತಿ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು.
ಯುವಜನರ ಹೋರಾಟವನ್ನು ತಡೆಯಲು ರೈಲುಗಳ ಸಂಚಾರ ರದ್ದುಗೊಳಿಸುವುದು ಹಾಗೂ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ಕ್ರಮಗಳನ್ನು ಕೈಗೊಳ್ಳುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ‘ನೀವು ಯುವಕರಿಗೆ ಹೆದರುತ್ತಿದ್ದರೆ ಇಡೀ ದೇಶವನ್ನೇ ಬಂದ್ ಮಾಡಿ’ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು.