ಮಂಗಳೂರು, ನ. 25: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ಕೊಡಿಸಿ. ಅಗತ್ಯವಿದ್ದರೆ ಸಂವಿಧಾನದ ಕಲಂ 371(ಕೆ) ಜಾರಿಗೆ ತನ್ನಿ. ಅದಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಪ್ರತ್ಯೇಕ ರಾಜ್ಯದ ಹೆಸರಿನಲ್ಲಿ ಕರ್ನಾಟಕವನ್ನು ಒಡೆಯುವ ಮಾತು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮಂಗಳೂರಿನ ತಣ್ಣೀರುಬಾವಿಯಲ್ಲಿ ಡೇಟಾ ಸೆಂಟರ್ ಸ್ಥಾಪನೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ಏಕೀಕರಣಕ್ಕಾಗಿ ನಮ್ಮ ಹಿರಿಯರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಹೋರಾಟದ ಫಲವಾಗಿ ಅಖಂಡ ಕರ್ನಾಟಕ ನಿರ್ಮಾಣವಾಗಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಸ್ವಾರ್ಥಕ್ಕಾಗಿ ಕರ್ನಾಟಕ ಮತ್ತು ಕನ್ನಡಿಗರನ್ನು ವಿಭಜಿಸುವ ರೀತಿಯಲ್ಲಿ ಮಾತನಾಡುವುದು ಹಿರಿಯ ನಾಯಕರಿಗೆ ಶೋಭೆ ತರುವುದಿಲ್ಲ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಏಕೆ ಕ್ರಮ ಕೈಗೊಳ್ಳಲಿಲ್ಲ? ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಕಲಂ 371(ಜೆ) ಜಾರಿಗೊಳಿಸಿದಂತೆ ಉತ್ತರ ಕರ್ನಾಟಕಕ್ಕೂ ವಿಶೇಷ ಸೌಲಭ್ಯ ಕಲ್ಪಿಸಲಿ. ಪ್ರಧಾನಿ ನರೇಂದ್ರ ಮೋದಿ ಅವರ ಮೂಲಕ ವಿಶೇಷ ನೆರವು ಕೊಡಿಸಲು ಯಾರೂ ಅಡ್ಡಿಪಡಿಸಿಲ್ಲ ಎಂದು ತಿರುಗೇಟು ನೀಡಿದರು.
ಹಗರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ
ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಯಾವುದೇ ಡಿಐಜಿ ಹೆಸರು ಉಲ್ಲೇಖವಾಗಿಲ್ಲ. ಒಂದು ವೇಳೆ ಹೆಸರು ಉಲ್ಲೇಖವಾಗಿದ್ದರೆ ಖಂಡಿತ ಕ್ರಮ ಕೈಗೊಳ್ಳಲಾಗುವುದು. ಹಗರಣದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
4 ತಿಂಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ನನ್ನ ವಿಕೆಟ್ ಬೀಳಲಿದೆ ಎಂದು ಹೇಳಿದ್ದರು. ನಾನು ಈಗಲೂ ಸಚಿವನಾಗಿಯೇ ಇದ್ದೇನೆ. ಆದರೆ ಕುಟುಕು ಕಾರ್ಯಾಚರಣೆಯ ಪ್ರಕರಣ ಈಗ ಎಲ್ಲಿಗೆ ಬಂದು ನಿಂತಿದೆ ಎಂದು ಪ್ರಶ್ನಿಸಿದರು.
ಕುಟುಕು ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸಿದ ಬಳಿಕ ಬಿಜೆಪಿ ನಾಯಕರು ಮೌನವಾಗಿರುವುದೇಕೆ? ಬೆಳಿಗ್ಗೆ ಎದ್ದ ಕೂಡಲೇ ಆರ್ಎಸ್ಎಸ್ ಕಚೇರಿಯಿಂದ ವಾಟ್ಸ್ಆ್ಯಪ್ ಸಂದೇಶ ಬರುತ್ತದೆ. ಅದರ ಸತ್ಯಾಸತ್ಯತೆಯನ್ನೂ ಪರಿಶೀಲಿಸದೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಾರೆ. ಇದೆಲ್ಲವೂ ಆರ್ಎಸ್ಎಸ್ ಕಲಿಸಿದ ಪಾಠ ಎಂದು ವಾಗ್ದಾಳಿ ನಡೆಸಿದರು.