ಬೆಂಗಳೂರು, ನ. 12: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನವೆಂಬರ್ 15ರಂದು ನಡೆಯಲಿರುವ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ನಡೆಸಬೇಕು. ಪರೀಕ್ಷಾ ನಿರ್ವಹಣೆಯಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ಅಗತ್ಯ ನಿರ್ದೇಶನ ನೀಡಿದರು.
ಚುನಾವಣೆಯ ಮಾದರಿಯಲ್ಲಿಯೇ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಸೂಕ್ತ ತರಬೇತಿ ನೀಡಿ, ಅದರ ವರದಿಯನ್ನು ಸಲ್ಲಿಸಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ಹಲವು ಸುಧಾರಣೆಗಳನ್ನು ಜಾರಿಗೆ ತರಲಾಗಿದ್ದು, ಲೋಕಸೇವಾ ಆಯೋಗ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಮೊಬೈಲ್ ನಿಷೇಧ, ನಿರಂತರ ನಿಗಾ
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಮೂಲಕ ನಿರಂತರ ನಿಗಾ ವಹಿಸಬೇಕು. ಪೊಲೀಸ್ ನೇಮಕಾತಿ ಪರೀಕ್ಷೆಯ ಮಾದರಿಯಲ್ಲಿ ಬಿಗಿ ಭದ್ರತೆ ಕಲ್ಪಿಸಬೇಕು. ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರದ ಆವರಣ ಪ್ರವೇಶಿಸಲು ಅವಕಾಶ ನೀಡಬಾರದು. ಅಧಿಕೃತವಾಗಿ ಪ್ರವೇಶಿಸುವವರನ್ನೂ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡಿಸಬೇಕು ಎಂದು ನಿರ್ದೇಶನ ನೀಡಿದರು.
ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಮೊಬೈಲ್ ಫೋನ್‌ಗಳೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಪರೀಕ್ಷಾ ಕೇಂದ್ರಗಳ ಸೂಕ್ಷ್ಮತೆಯನ್ನು ಆಧರಿಸಿ ಸಿಬ್ಬಂದಿ ನಿಯೋಜಿಸಬೇಕು. ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಭದ್ರತಾ ಉಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರು
ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಲಾಗುತ್ತಿದೆ. ಅವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜಿನ ಸಿಬ್ಬಂದಿಯಾಗಿರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿ ಪ್ರವೇಶಿಸಿದ ನಂತರವೂ ಮತ್ತೊಮ್ಮೆ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು.
ಖಾಸಗಿ ಅನುದಾನಿತ ಕಾಲೇಜುಗಳ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆದಿರುವುದು ಕಂಡುಬಂದರೆ ಅಂತಹ ಸಂಸ್ಥೆಗಳ ಪರವಾನಗಿ ರದ್ದುಗೊಳಿಸಲಾಗುವುದು. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು ಹಾಗೂ ವದಂತಿಗಳ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಬೇಕು. ಯಾವುದೇ ಅನುಮಾನಾಸ್ಪದ ಮಾಹಿತಿ ಕಂಡುಬಂದರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಅಭ್ಯರ್ಥಿಗಳು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು. ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.