ಹುಬ್ಬಳ್ಳಿ, ನ. 18: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ನಿರ್ವಾಹಕ ಷಡಕ್ಷರಯ್ಯ ಅತ್ತಿಕಟ್ಟಿಮಠ ಅವರ ನಿವಾಸದ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ.
ಹುಬ್ಬಳ್ಳಿ ನಗರ ಘಟಕ 1ರಲ್ಲಿ ಕಾರ್ಯನಿರ್ವಹಿಸುತ್ತಿರುವ ಷಡಕ್ಷರಯ್ಯ ಅವರ ಲೋಹಿಯಾನಗರದ ಗಾಂಧಿನಗರದಲ್ಲಿರುವ ಮನೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಡಿವೈಎಸ್ಪಿಗಳಾದ ಎಂ.ಎಸ್. ಪಾಟೀಲ ಹಾಗೂ ಬಸವರಾಜ ಬುದ್ನಿ ಅವರು ಆದಾಯ, ಆಸ್ತಿ ಹಾಗೂ ಇತರ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಷಡಕ್ಷರಯ್ಯ ಅವರು ಲೋಹಿಯಾನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಅದೇ ಪ್ರದೇಶದಲ್ಲಿ ಮೂರು ಮನೆಗಳನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.