ಹೊಸದಿಲ್ಲಿ, ಜುಲೈ 20: ನೀಟ್–ಯುಜಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಸಾಗರ ರೂಪ ತಾಳಿದ್ದು ರಾಜಧಾನಿ ಹೊಸದಿಲ್ಲಿಯ ವಿವಿಧ ಭಾಗಗಳಲ್ಲಿ ಸೋಮವಾರ ಹಲವಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮಂಡಿ ಹೌಸ್, ಪಟೇಲ ಚೌಕ್, ಜನಪಥ್, ಜಂತರ ಮಂತರ್, ಪಾರ್ಲಿಮೆಂಟ ಸ್ಟ್ರೀಟ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಈ ಪ್ರದೇಶಗಳಲ್ಲಿ ಈಗಾಗಲೇ ಬಿಗಿ ಭದ್ರತೆ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನಾಕಾರರು ಗುಂಪುಗೂಡಲು ಯತ್ನಿಸಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಂಸತ್ ಭವನದ ಸಮೀಪದಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್ ಕಚೇರಿ ಬಳಿ ಕನಿಷ್ಠ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಪ್ರತಿಭಟನಾಕಾರರನ್ನು ಅವರು ಮತ್ತೆ ಗುಂಪುಗೂಡದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜಧಾನಿಯ ವಿವಿಧ ಸ್ಥಳಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.