ಬೆಳಗಾವಿ, ಅ. 16 (ಸಮದರ್ಶಿ ಸುದ್ದಿ): ರಾಜೀವ ಗಾಂಧಿ ಆವಾಸ ಯೋಜನೆಯ ಪ್ರಗತಿ ಕುರಿತು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಶುಕ್ರವಾರ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಯೋಜನೆಯಡಿ ಈವರೆಗೆ ಕೈಗೊಂಡಿರುವ ಕಾಮಗಾರಿಗಳು ಹಾಗೂ ಅನುಷ್ಠಾನದ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯೋಜನೆಯ ಪ್ರಸ್ತುತ ಸ್ಥಿತಿಗತಿ ಮತ್ತು ಈವರೆಗೆ ಸಾಧಿಸಿರುವ ಪ್ರಗತಿಯ ವಿವರಗಳನ್ನು ಶಾಸಕರಿಗೆ ನೀಡಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ಆಸೀಫ್ ಸೇಠ್, ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ಆಡಳಿತ ಶಾಖೆಯ ಉಪ ಆಯುಕ್ತ ಉದಯ ಕುಮಾರ ಬಿ.ಟಿ. ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.