ಬೆಂಗಳೂರು, ನ. 12: ಪ್ರಧಾನಿ ನರೇಂದ್ರ ಮೋದಿ ಅವರ ಆನೇಕಲ್ ಭೇಟಿ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಆದೇಶ ಹೊರಡಿಸಿದ್ದಾರೆ.
ಆನೇಕಲ್ ತಾಲೂಕಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆಯ ‘ಪ್ರಶಾಂತಿ ಕುಟೀರ’ದಲ್ಲಿ ನವೆಂಬರ್ 13ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಂಸ ಮಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163(1)ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ನವೆಂಬರ್ 12ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 13ರ ಸಂಜೆ 4 ಗಂಟೆಯವರೆಗೆ ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.