ಬೆಂಗಳೂರು, ಅ. 18 (ಸಮದರ್ಶಿ ಸುದ್ದಿ): ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದರೂ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಯ ಪ್ರಭಾವದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 19ರಿಂದ 24ರವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಅಕ್ಟೋಬರ್ 19ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಬಿರುಗಾಳಿಯೂ ಬೀಸುವ ನಿರೀಕ್ಷೆಯಿದೆ.
5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಮಳೆ ಮುಂದುವರಿಕೆ: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ 4.2 ಮಿ.ಮೀ. ಮಳೆ ದಾಖಲಾಗಿದೆ. ಅಕ್ಟೋಬರ್ 19ರಂದು ಮೋಡಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು.
ಅಕ್ಟೋಬರ್ 20ರಂದು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 19ರಿಂದ 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
5 ಜಿಲ್ಲೆಗಳಲ್ಲಿ ಒಣ ಹವೆ: ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದರೂ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ಅಕ್ಟೋಬರ್ 22ರಿಂದ ಮಳೆ ಇಳಿಕೆ: ಅಕ್ಟೋಬರ್ 21 ಅಥವಾ 22ರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ ಚಾಮರಾಜನಗರ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಕ್ಟೋಬರ್ 22ರ ನಂತರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಇಳಿಕೆಯಾಗುವ ನಿರೀಕ್ಷೆಯಿದೆ.