ಹೊಸದಿಲ್ಲಿ, ಜೂ. 22: ಜೂನ್ 21ರಂದು ದೇಶಾದ್ಯಂತ ನಡೆದ ನೀಟ್ ಪದವಿಪೂರ್ವ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿನ ಆರೋಪಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯಪರಿಶೀಲನಾ ಘಟಕ ತಳ್ಳಿಹಾಕಿವೆ.
ಮರುಪರೀಕ್ಷೆ ಮುಕ್ತಾಯಗೊಂಡ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಲಾದ ಕೆಲವು ವಿಡಿಯೊಗಳು ಮತ್ತು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ, ನೀಟ್ ಮರುಪರೀಕ್ಷೆಯ ಪ್ರಶ್ನೆಪತ್ರಿಕೆಗೆ ಸಂಬಂಧಿಸಿದೆ ಎಂದು ಹರಿದಾಡುತ್ತಿರುವ ವಿಡಿಯೊಗಳು ಮತ್ತು ಸಂದೇಶಗಳು ಸತ್ಯಕ್ಕೆ ದೂರವಾಗಿದ್ದು, ಅವುಗಳಲ್ಲಿ ಮಾಡಲಾಗಿರುವ ಆರೋಪಗಳು ಸಂಪೂರ್ಣ ಸುಳ್ಳು ಎಂದು ತಿಳಿಸಿದೆ.
ಪರೀಕ್ಷೆಯನ್ನು ಕಟ್ಟುನಿಟ್ಟಿನ ಭದ್ರತಾ ಕ್ರಮಗಳು ಹಾಗೂ ಸಮಗ್ರ ಕಣ್ಗಾವಲು ವ್ಯವಸ್ಥೆಯಡಿ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಉದ್ದೇಶದಿಂದ ತಪ್ಪು ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಹರಡಲಾಗುತ್ತಿದೆ ಎಂದು ಆರೋಪಿಸಿದೆ.
ಸುಳ್ಳು ಮಾಹಿತಿ ಸೃಷ್ಟಿಸಿ ಪ್ರಸಾರ ಮಾಡುವುದು ಗಂಭೀರ ಅಪರಾಧವಾಗಿದ್ದು, ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಮತ್ತು ಕಾನೂನು ಜಾರಿ ಸಂಸ್ಥೆಗಳ ನೆರವಿನಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸ್ಥೆ ಎಚ್ಚರಿಸಿದೆ.
ಅಧಿಕೃತ ಮಾಹಿತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಜಾಲತಾಣ ಮತ್ತು ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳನ್ನು ಮಾತ್ರ ಅವಲಂಬಿಸುವಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಇದೇ ವೇಳೆ, ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಟೆಲಿಗ್ರಾಮ್ ಮೂಲಕ ಸೋರಿಕೆಯಾಗಿದೆ ಎಂಬ ಹೇಳಿಕೆಯನ್ನು ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯಪರಿಶೀಲನಾ ಘಟಕವೂ ನಿರಾಕರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ನಕಲಿ ಹಾಗೂ ಆಧಾರರಹಿತವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಮೇ 3ರಂದು ನಡೆದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಸಲಾಗಿತ್ತು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ತನಿಖೆ ಮುಂದುವರಿಸಿದ್ದು, ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.