LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ : ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಕಾಕ್ರೋಚ್‌ ಜನತಾ ಪಕ್ಷದ ಆನ್‌ಲೈನ್‌ ಅಭಿಯಾನ

ಹೊಸದಿಲ್ಲಿ, ಮೇ 22 : ನೀಟ್‌-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್‌ ಜನತಾ ಪಕ್ಷ ಆನ್‌ಲೈನ್‌ ಅರ್ಜಿ ಅಭಿಯಾನ ಆರಂಭಿಸಿದೆ.

ಪಕ್ಷದ ಸಂಸ್ಥಾಪಕ ಅಭಿಜೀತ ದೀಪ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಬಿಡುಗಡೆ ಮಾಡಿ, ದೇಶದಾದ್ಯಂತ ವಿದ್ಯಾರ್ಥಿಗಳು, ಪೋಷಕರು ಮತ್ತು ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಮತ್ತು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ಈ ವಿವಾದ ಗಂಭೀರ ಧಕ್ಕೆ ತಂದಿದೆ ಎಂದು ದೀಪ್ಕೆ ಆರೋಪಿಸಿದ್ದಾರೆ. ಇದು ಕೇವಲ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣವಲ್ಲ, ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ವೈಫಲ್ಯಕ್ಕೆ ಉದಾಹರಣೆ ಎಂದು ಅವರು ಟೀಕಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಹೊರಬಂದ ನಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿವೆ. ವರ್ಷಗಳ ಕಾಲ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸಿದ ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆ ಮತ್ತು ಆತಂಕ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.

ಅನೇಕ ವಿದ್ಯಾರ್ಥಿಗಳು ನಿರಾಶೆ, ಭಯ ಮತ್ತು ಆತಂಕದಿಂದ ಮಾನಸಿಕವಾಗಿ ಕುಗ್ಗಿದ್ದಾರೆ. ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ ಆತ್ಮಹತ್ಯೆ ಪ್ರಕರಣಗಳು ದೇಶದ ವಿವಿಧ ಭಾಗಗಳಲ್ಲಿ ವರದಿಯಾಗುತ್ತಿದ್ದು, ಇದು ಶಿಕ್ಷಣ ವ್ಯವಸ್ಥೆಯ ಗಂಭೀರ ಸಮಸ್ಯೆಯನ್ನು ಬಯಲಿಗೆಳೆಯುತ್ತದೆ ಎಂದು ದೀಪ್ಕೆ ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆ ಮಾಡಿದ ವಿಡಿಯೊದಲ್ಲಿ, 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳಿರುವುದು ವ್ಯವಸ್ಥೆಯ ದೋಷ ಎಂದು ಆರೋಪಿಸಿದ ಅವರು, ಇದರ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್‌ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನೀಟ್‌-ಯುಜಿ ವಿವಾದದ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಉನ್ನತ ಮಟ್ಟದಲ್ಲಿ ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ವಿಶ್ವಾಸ ಮರುಸ್ಥಾಪಿಸಲು ಶಿಕ್ಷಣ ಸಚಿವರ ರಾಜೀನಾಮೆ ಮೊದಲ ಹೆಜ್ಜೆಯಾಗಬೇಕು ಎಂದು ಹೇಳಿದ್ದಾರೆ.

ಸರ್ಕಾರ ಮರುಪರೀಕ್ಷೆ ಘೋಷಿಸಿರುವುದೇ ಪರೀಕ್ಷಾ ಪ್ರಕ್ರಿಯೆಯಲ್ಲಿನ ಲೋಪಗಳನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ದೀಪ್ಕೆ ಹೇಳಿದ್ದಾರೆ. ಪರೀಕ್ಷಾ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕೊರತೆ ಇದೆ ಎಂದು ಅವರು ಟೀಕಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆ, ಶಿಕ್ಷಣ ಸುಧಾರಣೆ ಹಾಗೂ ಯುವಜನರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ದೀಪ್ಕೆ, ಸಿಬಿಎಸ್‌ಇ ಮರುಪರೀಕ್ಷಾ ಶುಲ್ಕದ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ.

ವಿದ್ಯಾರ್ಥಿಗಳ ಆತಂಕ ಮತ್ತು ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ನೀಡುವ ಬದಲು ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಉಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನೀಟ್‌-ಯುಜಿ 2026 ವಿವಾದ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಕಾಕ್ರೋಚ್‌ ಜನತಾ ಪಕ್ಷ ಈ ಆನ್‌ಲೈನ್‌ ಅಭಿಯಾನ ಆರಂಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST